November 15, 2026
Sunday, November 15, 2026
spot_img

ಜನಜಾತೀಯ ಗೌರವ ದಿವಸ: 240ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆದಿವಾಸಿ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವಾದ ‘ಜನಜಾತೀಯ ಗೌರವ ದಿವಸ’ದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶದ ಬುಡಕಟ್ಟು ಸಮುದಾಯಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ.

 ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಪಾಲ್ಗೊಂಡ ಪ್ರಧಾನಿ, ಬುಡಕಟ್ಟು ಜನರ ಜೀವನಮಟ್ಟ ಸುಧಾರಣೆ ಹಾಗೂ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಸುಮಾರು 3,000 ಕೋಟಿ ರೂ. ವೆಚ್ಚದ 246 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

173 ಯೋಜನೆಗಳ ಲೋಕಾರ್ಪಣೆ

ಶಿಕ್ಷಣ, ಆರೋಗ್ಯ, ಜೀವನೋಪಾಯ ಮತ್ತು ಸಮುದಾಯ ಮೂಲಸೌಕರ್ಯ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ಮೋದಿ ಒಟ್ಟು 173 ಯೋಜನೆಗಳನ್ನು ಉದ್ಘಾಟಿಸಿದರು. ಇದರಲ್ಲಿ ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾದ 38 ಏಕಲವ್ಯ ಮಾದರಿ ವಸತಿ ಶಾಲೆಗಳು ಹಾಗೂ ಪಿಎಂ-ಜನ್‌ಮನ್ ಯೋಜನೆಯಡಿ 100 ಬಹುಪಯೋಗಿ ಕೇಂದ್ರಗಳು ಸೇರಿವೆ.

ಅಲ್ಲದೆ, ಬುಡಕಟ್ಟು ಸಂಸ್ಕೃತಿ ಮತ್ತು ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಬುಡಕಟ್ಟು ಸಂಶೋಧನಾ ಸಂಸ್ಥೆ (TRI) ಕಟ್ಟಡ ಮತ್ತು ಮಿಜೋರಾಂನ ಐಜ್ವಾಲ್‌ನಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ 19ನೇ ಶತಮಾನದ ಮಿಜೋ ನಾಯಕಿ ‘ರೊಪುಯಿಲಿಯಾನಿ’ ಹೆಸರಿನ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯವನ್ನೂ ಲೋಕಾರ್ಪಣೆಗೊಳಿಸಿದರು.

ಇದನ್ನೂ ಓದಿ:

ಹೊಸ ಶಾಲೆಗಳು, ಮಾರುಕಟ್ಟೆ ಕೇಂದ್ರಗಳಿಗೆ ಶಂಕುಸ್ಥಾಪನೆ

ಇದರೊಂದಿಗೆ, ಬುಡಕಟ್ಟು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ 19 ಹೊಸ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ಬುಡಕಟ್ಟು ಉತ್ಪಾದಕರಿಗೆ ಉತ್ತಮ ಮಾರುಕಟ್ಟೆ ಒದಗಿಸಲು 12 ಬುಡಕಟ್ಟು ಬಹುಪಯೋಗಿ ಮಾರುಕಟ್ಟೆ ಕೇಂದ್ರಗಳು ಹಾಗೂ ಪಿಎಂ-ಜನ್‌ಮನ್ ಮತ್ತು ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಇತರ 42 ಯೋಜನೆಗಳಿಗೆ ಅಡಿಗಲ್ಲು ಹಾಕಿದರು. ಇದೇ ವೇಳೆ ವಿವಿಧ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

ಸಿಎಂ ದೇವೇಂದ್ರ ಫಡ್ನವೀಸ್ ಮೆಚ್ಚುಗೆ

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, 2021ರಲ್ಲಿ ನವೆಂಬರ್ 15ನ್ನು ‘ಜನಜಾತೀಯ ಗೌರವ ದಿವಸ’ ಎಂದು ಘೋಷಿಸಿದ ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. “ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಬುಡಕಟ್ಟು ನಾಯಕರನ್ನು ಈ ಹಿಂದೆ ಮರೆಯಲಾಗಿತ್ತು. ಆದರೆ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಆ ಮಹಾನಾಯಕರ ಇತಿಹಾಸವನ್ನು ಮತ್ತೆ ಬೆಳಕಿಗೆ ತಂದಿದ್ದಾರೆ” ಎಂದು ಶ್ಲಾಘಿಸಿದರು.

Must Read

Skip to toolbar