ಹೊಸದಿಗಂತ ವರದಿ ಬೆಳಗಾವಿ:
ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾತ್ಮಕ ಸಿದ್ಧತೆ ಮತ್ತು ಚುನಾವಣಾ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಬಿಜೆಪಿ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ ಆಯೋಜಿಸಲಾಯಿತು.
ಭಾನುವಾರ ನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಸತತ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಪಕ್ಷದ ಸಂಘಟನಾತ್ಮಕ ಸ್ಥಿತಿಗತಿ ಕುರಿತು ಚರ್ಚಿಸಲಾಯಿತು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಸಿದ್ಧತೆ, ಚುನಾವಣಾ ಕಾರ್ಯತಂತ್ರ ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕುರಿತು ಹರೀಶ್ ದ್ವಿವೇದಿ ಅವರು ಸಂಸದರು, ಶಾಸಕರು ಹಾಗೂ ಮಾಜಿ ಶಾಸಕರಿಗೆ ವಿವಿಧ ಜವಾಬ್ದಾರಿಗಳನ್ನು ವಹಿಸಿ ಟಾಸ್ಕ್ ನೀಡಿದರು.

ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಿಷ್ಠಗೊಳಿಸುವುದು, ಕಾರ್ಯಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆ ಖಚಿತಪಡಿಸುವುದು, ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕ ಸಾಧಿಸುವುದು ಹಾಗೂ ಮುಂಬರುವ ಚುನಾವಣೆಗಳಲ್ಲಿ ಅನುಸರಿಸಬೇಕಾದ ಕಾರ್ಯಯೋಜನೆಗಳ ಕುರಿತು ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಯಿತು.
ಪಕ್ಷದ ಸಂಘಟನೆಗೆ ಸಂಬಂಧಿಸಿದ ಹಲವು ಮಹತ್ವದ ವಿಚಾರಗಳನ್ನು ಪ್ರಸ್ತಾಪಿಸಿದ ಮುಖಂಡರು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಸಂಘಟನಾತ್ಮಕ ಚಟುವಟಿಕೆಗಳು ಹಾಗೂ ಚುನಾವಣಾ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಸಂಸದರಾದ ಜಗದೀಶ ಶೆಟ್ಟರ್, ಪಿ.ಸಿ. ಗದ್ದಿಗೌಡರ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ವಿಭಾಗ ಪ್ರಭಾರಿ ಸಂಜಯ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಶಶಿಕಲಾ ಜೊಲ್ಲೆ, ವಿಠ್ಠಲ ಹಲಗೇಕರ, ಸಿದ್ದು ಸವದಿ, ದುರ್ಯೋಧನ ಐಹೊಳೆ, ನಿಖಿಲ್ ಕತ್ತಿ, ಹನುಮಂತ ನಿರಾಣಿ, ಮುರುಗೇಶ ನಿರಾಣಿ, ಪಿ.ಎಚ್. ಪೂಜಾರ್, ಅನಿಲ ಬೆನಕೆ, ಎಸ್.ಕೆ. ಬೆಳ್ಳುಬ್ಬಿ, ಶ್ರೀಮಂತ ಪಾಟೀಲ, ರಮೇಶ ಕತ್ತಿ, ಮಂಗಲ ಅಂಗಡಿ, ಈರಣ್ಣ ಕಡಾಡಿ, ಅಣ್ಣಾಸಾಹೇಬ ಜೊಲ್ಲೆ, ವಿಭಾಗ ಸಹಪ್ರಭಾರಿ ಬಸವರಾಜ ಯಂಕಂಚಿ, ಗುರುಲಿಂಗಪ್ಪ ಅಂಗಡಿ, ಶಾಂತಗೌಡ ಪಾಟೀಲ ಸೇರಿದಂತೆ ಮಾಜಿ ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು ಸೇರಿದಂತೆ ಹಲವರು ಇದ್ದರು ಉಪಸ್ಥಿತರಿದ್ದರು.



