November 18, 2026
Wednesday, November 18, 2026
spot_img

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರು-ಬೊಲೆರೊ ನಡುವೆ ಡಿಕ್ಕಿ, ನಾಲ್ವರು ಯುವಕರು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅವಘಡಕ್ಕೆ ಬೆಂಗಳೂರಿನ ನಾಲ್ವರು ಯುವಕರು ಬಲಿಯಾಗಿದ್ದಾರೆ. ಕಾರು ಮತ್ತು ಬೊಲೆರೊ ವಾಹನದ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿಯಲ್ಲಿ, ಕಾರಿನಲ್ಲಿದ್ದ ಮತ್ತೊಬ್ಬ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಅಪಘಾತ ಸಂಭವಿಸಿದ್ದು ಹೇಗೆ?

ಐವರು ಯುವಕರ ತಂಡವೊಂದು ಕಾರಿನಲ್ಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ನಂದಿಗಿರಿಧಾಮ ಪೊಲೀಸ್ ಠಾಣೆಯ ಎದುರು ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಡಿವೈಡರ್‌ನ್ನು ದಾಟಿ ಪಕ್ಕದ ಪಥದಲ್ಲಿ ಎದುರಿನಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ರಭಸವಾಗಿ ಅಪ್ಪಳಿಸಿದೆ.

ಇದನ್ನೂ ಓದಿ:

ಮೃತರ ಗುರುತು ಪತ್ತೆ

ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರಲ್ಲಿ ಇಬ್ಬರನ್ನು ಬೆಂಗಳೂರಿನ ಯಲಹಂಕ ನಿವಾಸಿಗಳಾದ ಜಗದೀಶ್ ಮತ್ತು ವೈಷ್ಣವ್ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ಯುವಕನನ್ನು ತಕ್ಷಣವೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಬೊಲೆರೊ ವಾಹನದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ನಂದಿಗಿರಿಧಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

Skip to toolbar