ಹೊಸದಿಗಂತ ವರದಿ ಚಿತ್ರದುರ್ಗ:
ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕೂ ಹೆಚ್ಚು ಆಸ್ತಿಪಾಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ಇಬ್ಬರು ಅಧಿಕಾರಿಗಳ ಮನೆಗೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿದ್ಯಾನಗರದಲ್ಲಿರುವ ವೆಂಕಟೇಶ್ ಮನೆ ಹಾಗೂ ಚಳ್ಳಕೆರೆ ರಸ್ತೆಯಲ್ಲಿರುವ ಡಾ.ರವೀಂದ್ರ ಮಾಲೀಕತ್ವದ ಆಸ್ಪತ್ರೆ ಹಾಗೂ ಮನೆ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ಮತ್ತು ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಮನೆಯಲ್ಲಿನ ವಿವಿಧ ದಾಖಲೆಗಳನ್ನು ಪರಿಶೀಲಿಸಲಾಗಿದೆ.
ಇದನ್ನೂ ಓದಿ:
ದಾಳಿ ಸಂದರ್ಭದಲ್ಲಿ ತೂಕ ಮತ್ತು ಅಳತೆ ಇಲಾಖೆ ಇನ್ಸ್ಪೆಕ್ಟರ್ ವೆಂಕಟೇಶ್ ಮನೆಯಲ್ಲಿ ಹಣ, ಚಿನ್ನಾಭರಣ ಸೇರಿದಂತೆ ಒಟ್ಟು 2.1 ಕೋಟಿ ಮೌಲ್ಯದ ಆಸ್ತಿ ಪತ್ತೆ. 21 ಲಕ್ಷ ನಗದು, 28 ಲಕ್ಷ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇದಲ್ಲದೇ ವಾಹನಗಳು, ನಿವೇಶನ ಪತ್ರಗಳು ಪತ್ತೆಯಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.



