ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೂತನ ಕಮಿಷನರೇಟ್ ವ್ಯವಸ್ಥೆ ಜಾರಿಯಾಗಿದ್ದು, ನಗರದ ಮೊದಲ ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿರುವ ಅವರು, ಇಲಾಖೆಯಲ್ಲಿ ಶಿಸ್ತು ಮತ್ತು ಪಾರದರ್ಶಕತೆ ಕಾಪಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬೆಳಗ್ಗೆಯೇ ಕಚೇರಿಯಲ್ಲಿ ಐವರು ನೂತನ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಗಳೊಂದಿಗೆ ಸಭೆ ನಡೆಸಿದ ಹಿತೇಂದ್ರ ಅವರು, ಪೊಲೀಸ್ ಮ್ಯಾನುವಲ್‌ನಲ್ಲಿ ನಮೂದಿಸಿರುವ ನಿಯಮಗಳನ್ನು ಎಲ್ಲರೂ ಅಚ್ಚುಕಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ಪೊಲೀಸ್ ಮ್ಯಾನುವಲ್‌ನಲ್ಲಿ ಏನು ನಿಯಮಗಳಿವೆಯೋ ಅದರಂತೆ ಎಲ್ಲರೂ ಕೆಲಸ ನಿರ್ವಹಿಸಬೇಕು. ಯಾವುದೇ ರೀತಿಯ ಅಶಿಸ್ತನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಅಧಿಕಾರಿಗಳು ಮತ್ತು ಸಿಬ್ಬಂದಿ ಕಾನೂನುಬದ್ಧವಾಗಿ ಮಾತ್ರ ಕೆಲಸ ಮಾಡಬೇಕು. ಅಕ್ರಮ ಚಟುವಟಿಕೆಗಳಲ್ಲಿ ತೊಡಗುವುದು, ಮಾಫಿಯಾಗಳೊಂದಿಗೆ ಕೈಜೋಡಿಸುವುದು ಹಾಗೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇಂತಹ ಚಟುವಟಿಕೆಗಳಲ್ಲಿ ತೊಡಗುವ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಸಂದೇಶ ರವಾನಿಸಿದ್ದಾರೆ. ಇದೇ ವೇಳೆ ರೌಡಿ ಸ್ಕ್ವಾಡ್ ಇದೆ ಎಂಬ ಕಾರಣಕ್ಕೆ ಯಾರೂ ಮೈಮರೆಯಬಾರದು ಎಂದು ಎಚ್ಚರಿಸಿದ ಅವರು, ಐವರು ಪೊಲೀಸ್ ಆಯುಕ್ತರು ತಮ್ಮ ವ್ಯಾಪ್ತಿಯ ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಈ ಸೂಚನೆಗಳನ್ನು ಸ್ಪಷ್ಟವಾಗಿ ತಲುಪಿಸಬೇಕು ಎಂದು ಆದೇಶಿಸಿದ್ದಾರೆ.
ನೂತನ ಕಮಿಷನರೇಟ್ ವ್ಯವಸ್ಥೆಯ ಆರಂಭದಲ್ಲೇ ಪೊಲೀಸ್ ಇಲಾಖೆಯಲ್ಲಿ ಶಿಸ್ತು, ಪಾರದರ್ಶಕತೆ ಮತ್ತು ಕಾನೂನುಬದ್ಧ ಕಾರ್ಯನಿರ್ವಹಣೆಗೆ ಆದ್ಯತೆ ನೀಡುವ ಮೂಲಕ ಆರ್. ಹಿತೇಂದ್ರ ಅವರು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.



