ಹೊಸದಿಗಂತ ವರದಿ ಗೋಣಿಕೊಪ್ಪ:
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಡಗು ಜಿಲ್ಲಾ ಸಂಘಚಾಲಕ, ವನವಾಸಿ ಕಲ್ಯಾಣದ ರಾಜ್ಯಾಧ್ಯಕ್ಷ ಚೆಕ್ಕೇರ ಮನು ಕಾವೇರಪ್ಪ (64) ಅವರು ಗುರುವಾರ ಹೃದಯಾಘಾತದಿಂದ ನಿಧನರಾದರು.
ಇಲ್ಲಿಗೆ ಸಮೀಪದ ದೇವರಪುರ ಗ್ರಾಮದ ನಿವಾಸಿಯಾಗಿದ್ದ ಮನು ಕಾವೇರಪ್ಪ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಮ್ಮತ್ತಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದದಲ್ಲಿ ಗುರುತಿಸಿಕೊಂಡಿದ್ದ ಅವರು ಸಕ್ರಿಯ ಕಾರ್ಯಕರ್ತರಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಪ್ರಸಕ್ತ ಸಂಘಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೆ, ವನವಾಸಿ ಕಲ್ಯಾಣದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ರಾಜ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ:
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಶುಕ್ರವಾರ ದೇವರಪುರದಲ್ಲಿರುವ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮನು ಕಾವೇರಪ್ಪ ಅವರ ನಿಧನಕ್ಕೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.



