ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಗುರು ಬಸವಣ್ಣನವರು ಮತ್ತು ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎನ್ನಲಾದ ಲೇಖಕ ರವಿ ಹಂಜ್ ಅವರ ‘ಬಸವಮಂಟಪ’ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಅರಣ್ಯ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಈ ಮಾಹಿತಿ ಹಂಚಿಕೊಂಡಿರುವ ಸಚಿವರು, ಸರ್ಕಾರದ ಈ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ, ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರವಿ ಹಂಜ್ ಅವರ ಎಲ್ಲಾ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ತಾವು ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಂಪುಟ ಸಮ್ಮತಿಸಿದೆ ಎಂದು ಹೇಳಿದ್ದಾರೆ.
ಮಹಾನಾಯಕರಿಗೆ ಅವಮಾನ ಸಹಿಸಲು ಸಾಧ್ಯವಿಲ್ಲ
12ನೇ ಶತಮಾನದಲ್ಲೇ ವರ್ಗ ಮತ್ತು ಜಾತಿ ರಹಿತ ಸಮಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಮಹಾನ್ ಚೇತನ ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಸಚಿವರಾದ ಎಂ.ಬಿ. ಪಾಟೀಲ್, ಡಾ. ಶರಣಪ್ರಕಾಶ್ ಪಾಟೀಲ್, ಎಸ್.ಎಸ್. ಮಲ್ಲಿಕಾರ್ಜುನ್, ಬಸವರಾಜ ರಾಯರೆಡ್ಡಿ, ಕೆ.ಎಚ್. ಮುನಿಯಪ್ಪ ಸೇರಿದಂತೆ ಎಲ್ಲಾ ಸಹೋದ್ಯೋಗಿಗಳು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಈ ನಿರ್ಧಾರಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಖಂಡ್ರೆ ವಿವರಿಸಿದರು.
ಸಮಾಜದ ಸಾಮರಸ್ಯ ಕದಡುವ ಯತ್ನಕ್ಕೆ ಬ್ರೇಕ್
ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಈಶ್ವರ ಖಂಡ್ರೆ, “ಸಚಿವನಾಗಿ ನಾನು ಬಹಿರಂಗವಾಗಿ ಪುಸ್ತಕ ಮುಟ್ಟುಗೋಲಿಗೆ ಒತ್ತಾಯಿಸಬಾರದು. ಆದರೆ, ರವಿ ಹಂಜ್ ಅವರು ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಇಡೀ ಲಿಂಗಾಯತ ಸಮುದಾಯ ಮತ್ತು ಬಸವಾನುಯಾಯಿಗಳ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದ್ದಾರೆ. ಈ ಕೃತಿಯು ಸಮಾಜದ ಸಾಮರಸ್ಯವನ್ನು ಕದಡುತ್ತಿದ್ದು, ತಕ್ಷಣವೇ ಇದನ್ನು ಮುಟ್ಟುಗೋಲು ಹಾಕಿಕೊಂಡು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಮಾಡಿದ್ದೆ” ಎಂದರು.
ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಪ್ರಚೋದನೆ ಸಲ್ಲದು
“ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಗೌರವಿಸುತ್ತೇನೆ. ಆದರೆ, ಮಹಾಪುರುಷರಿಗೆ ಅವಮಾನ ಮಾಡುವುದು ಮತ್ತು ಜನರ ಭಾವನೆಗಳನ್ನು ಕೆರಳಿಸುವಂತೆ ಪ್ರಚೋದನಕಾರಿಯಾಗಿ ಮಾತನಾಡುವುದನ್ನು ಒಪ್ಪಲು ಸಾಧ್ಯವೇ ಇಲ್ಲ. ರವಿ ಹಂಜ್ ಅವರು ಲಿಂಗಾಯತರನ್ನು ‘ಲಿಂಗಹತರು’ ಎಂದು ಕರೆಯುವ ಮೂಲಕ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಇದು ವಿಶ್ವಾದ್ಯಂತ ಇರುವ ಸಮುದಾಯದ ಬಾಂಧವರಿಗೆ ತೀವ್ರ ನೋವುಂಟುಮಾಡಿದೆ” ಎಂದು ಖಂಡ್ರೆ ಕಿಡಿಕಾರಿದರು.
“ಯಾವುದೇ ಅಧ್ಯಯನವಿಲ್ಲದೆ ಸ್ವಯಂಘೋಷಿತ ಸಂಶೋಧಕರಂತೆ ಭಾವನಾತ್ಮಕ ವಿಚಾರಗಳ ಬಗ್ಗೆ ಮಾತನಾಡುವುದು ಸರಿಯಲ್ಲ. ಇಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವ ವ್ಯಕ್ತಿಯ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಸಚಿವರು ಒತ್ತಾಯಿಸಿದ್ದಾರೆ.



