November 20, 2026
Friday, November 20, 2026
spot_img

WEATHER | ರಾಜ್ಯಾದ್ಯಂತ ಚಳಿಯ ಅಬ್ಬರ: ಮುಂದಿನ ಎರಡು ದಿನ ತಾಪಮಾನ ಇನ್ನಷ್ಟು ಕುಸಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮಳೆಯ ಅಬ್ಬರ ಸಂಪೂರ್ಣವಾಗಿ ತಗ್ಗಿದ್ದು, ಇದೀಗ ಚಳಿಗಾಲ ತನ್ನ ಅಸಲಿ ಪ್ರಭಾವವನ್ನು ತೋರಿಸಲು ಆರಂಭಿಸಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆಯ ವಾತಾವರಣ ಮುಂದುವರಿದಿದ್ದು, ಮುಂಜಾನೆ ಮತ್ತು ರಾತ್ರಿಯ ವೇಳೆ ಮೈಕೊರೆಯುವ ಚಳಿ ಕಾಣಿಸಿಕೊಳ್ಳುತ್ತಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಕನಿಷ್ಠ ತಾಪಮಾನದಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಬಯಲು ಪ್ರದೇಶಗಳಲ್ಲಿ ವಿಜಯಪುರ ಜಿಲ್ಲೆ ಅತಿ ಹೆಚ್ಚು ಚಳಿಗೆ ಸಾಕ್ಷಿಯಾಗಿದೆ. ಇಲ್ಲಿ ರಾಜ್ಯದಲ್ಲೇ ಅತ್ಯಂತ ಕಡಿಮೆ ಅಂದರೆ 12.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಜನಜೀವನದ ಮೇಲೆ ಚಳಿಯ ಪ್ರಭಾವ ಹೆಚ್ಚಾಗುತ್ತಿದೆ. ಬೆಳಗಿನ ಜಾವ ಮನೆಯಿಂದ ಹೊರಬರಲು ಜನರು ಹಿಂದೇಟು ಹಾಕುವಂತಾಗಿದ್ದು, ಬೆಚ್ಚಗಿನ ಉಡುಪುಗಳ ಮೊರೆ ಹೋಗುತ್ತಿದ್ದಾರೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸದ್ಯಕ್ಕೆ ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಈ ಮೂರೂ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಒಣಹವೆ ಮುಂದುವರಿಯಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಇರಲಿದ್ದು, ರಾತ್ರಿ ವೇಳೆ ತಾಪಮಾನ ಇನ್ನಷ್ಟು ಕುಸಿಯುವ ನಿರೀಕ್ಷೆಯಿದೆ.

ರಾಜಧಾನಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನಲ್ಲೂ ಇದೇ ರೀತಿಯ ವಾತಾವರಣ ಇರಲಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

Must Read