ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿನ ನಿಷೇಧ ತೆರವುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಮುಂದುವರಿಯಲು ಇದ್ದ ಕಾನೂನು ಅಡೆತಡೆ ನಿವಾರಣೆಯಾಗಿದೆ.
ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠವು ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಜನವರಿ 23, 2026ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಎತ್ತಿಹಿಡಿದಿದೆ.
ವಿಚಾರಣೆ ವೇಳೆ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರು ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವ ಬದಲು ನಿಯಂತ್ರಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ‘ಯುವತಿಯರಿಗೆ ಬೈಕ್ ಟ್ಯಾಕ್ಸಿಗಳು ಹೆಚ್ಚು ಸುರಕ್ಷಿತವಾಗಿವೆ. ಅವುಗಳಲ್ಲಿ ಜಿಪಿಎಸ್ ವ್ಯವಸ್ಥೆಯೂ ಇದೆ. ನಿಷೇಧಿಸುವ ಬದಲು ನಿಯಂತ್ರಿಸುವುದು ಉತ್ತಮ. ಈಗಾಗಲೇ 25 ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸುತ್ತಿವೆ’ ಎಂದು ಅವರು ಹೇಳಿದರು.
ಹೈಕೋರ್ಟ್ ಆದೇಶದಲ್ಲಿ ಏನಿತ್ತು?
2025ರ ಏಪ್ರಿಲ್ನಲ್ಲಿ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠವು ಅಗತ್ಯ ನಿಯಮಾವಳಿಗಳನ್ನು ರೂಪಿಸುವವರೆಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಓಲಾ, ಉಬರ್, ರ್ಯಾಪಿಡೊ ಸೇರಿದಂತೆ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ಗಳು ಮೇಲ್ಮನವಿ ಸಲ್ಲಿಸಿದ್ದವು.
ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ವಿಭಾಗೀಯ ಪೀಠವು 2026ರ ಜನವರಿ 23ರಂದು ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿತ್ತು. ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಿ, ಕಾನೂನಿನ ಪ್ರಕಾರ ಅಗತ್ಯ ಅನುಮತಿಗಳನ್ನು ಪಡೆದು ಗುತ್ತಿಗೆ ವಾಹನಗಳಾಗಿ ಬಳಸಬಹುದು ಎಂದು ಸ್ಪಷ್ಟಪಡಿಸಿತ್ತು. ಅಲ್ಲದೆ, ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಗೆ ಅಗತ್ಯ ಷರತ್ತುಗಳನ್ನು ವಿಧಿಸಲು ಸಾರಿಗೆ ಪ್ರಾಧಿಕಾರಗಳಿಗೆ ಅಧಿಕಾರವಿದೆ ಎಂದು ತಿಳಿಸಿತ್ತು.
ಸುಪ್ರೀಂ ಕೋರ್ಟ್ ತೀರ್ಪಿಗೆ ವಿವಿಧ ಸಾರಿಗೆ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟವು ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವಂತೆಯೂ ಮನವಿ ಮಾಡಿದೆ. ಇನ್ನು, ಸುಪ್ರೀಂ ಕೋರ್ಟ್ನ ಅಧಿಕೃತ ಆದೇಶವನ್ನು ಪರಿಶೀಲಿಸಿದ ಬಳಿಕವೇ ಮುಂದಿನ ಕ್ರಮದ ಕುರಿತು ಪ್ರತಿಕ್ರಿಯೆ ನೀಡುವುದಾಗಿ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಮೇಲ್ಮನವಿ ವಜಾಗೊಳಿಸಿರುವುದರಿಂದ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿನ ಸಂಪೂರ್ಣ ನಿಷೇಧಕ್ಕೆ ಅವಕಾಶವಿಲ್ಲದಂತಾಗಿದೆ. ಆದರೆ, ವಾಹನ ನೋಂದಣಿ, ಪರವಾನಗಿ ಹಾಗೂ ಸಾರಿಗೆ ಪ್ರಾಧಿಕಾರ ವಿಧಿಸುವ ನಿಯಮಗಳು ಮತ್ತು ಷರತ್ತುಗಳನ್ನು ಪಾಲಿಸುವುದು ನಿರ್ವಾಹಕರಿಗೆ ಕಡ್ಡಾಯವಾಗಿರಲಿದೆ.



