ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ: ಜಗದ್ಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದಲ್ಲದೆ, ‘ಬಸವ ಮಂಟಪ’ ಪುಸ್ತಕದಲ್ಲಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಅಂಶಗಳನ್ನು ಪ್ರಕಟಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ ಅವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಬಸವಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರು.
ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ವಿವಿಧ ಬಸವಪರ ಸಂಘಟನೆಗಳ ನೇತೃತ್ವದಲ್ಲಿ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹಾಗೂ ಅಥಣಿ ಮೋಟಗಿ ಮಠದ ಶ್ರೀ ಪ್ರಭುಚನ್ನಬಸವ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ನೂರಾರು ಕಾರ್ಯಕರ್ತರು ಲೇಖಕ ರವಿ ಹಂಜ ಹಾಗೂ ವಿವಾದಿತ ಸಂದರ್ಶನ ಪ್ರಸಾರ ಮಾಡಿದ ವಿಶ್ವವಾಣಿ ವಾಹಿನಿಯ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪತ್ರಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಬಸವಣ್ಣನವರ ವ್ಯಕ್ತಿತ್ವ ಹಾಗೂ ತತ್ವಾದರ್ಶಗಳಿಗೆ ಧಕ್ಕೆ ತರುವ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ. ಸಮಾಜದ ಶಾಂತಿ ಮತ್ತು ಸ್ವಾಸ್ಥ್ಯ ಕದಡುವ ಇಂತಹ ಕೃತ್ಯಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ವಿವಾದಿತ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಸ್ವಾಗತಾರ್ಹ. ಆದರೆ, ಅದರ ಮಾರಾಟ ಮತ್ತು ಪ್ರಸಾರ ಸಂಪೂರ್ಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಶ್ರೀ ಪ್ರಭುಚನ್ನಬಸವ ಮಹಾಸ್ವಾಮಿಗಳು ಮಾತನಾಡಿ, ರವಿ ಹಂಜ ವಿದೇಶದಲ್ಲಿದ್ದರೂ ಬಂಧಿಸಿ ರಾಜ್ಯಕ್ಕೆ ಕರೆತರಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸುವುದರ ಜತೆಗೆ ಕಾನೂನು ಹೋರಾಟವನ್ನೂ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ, ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು. ಇದರ ಹಿಂದೆ ಇರುವ ಸಾಧ್ಯತೆಯಿರುವ ಷಡ್ಯಂತ್ರದ ಎಲ್ಲ ಆಯಾಮಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓಧಿ:
ಈಗಾಗಲೇ ರವಿ ಹಂಜ ಹಾಗೂ ವಿಶ್ವೇಶ್ವರ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು, ರಾಷ್ಟ್ರೀಯ ಬಸವದಳ ಹಾಗೂ ವಿವಿಧ ಬಸವಪರ ಸಂಘಟನೆಗಳ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.



