ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವಿಸಿದ ಪರಿಣಾಮ 15 ಮಂದಿ ಪ್ರಾಣ ಕಳೆದುಕೊಂಡಿದ್ದು, ಸುಮಾರು 150ಕ್ಕೂ ಹೆಚ್ಚು ಜನರು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಚಂದೇಲ್ ಜಿಲ್ಲೆಯ ಚಕ್ಪಿ ಕರೋಂಗ್ ಮತ್ತು ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಕಳೆದ ಎರಡು-ಮೂರು ದಿನಗಳಿಂದ ಸ್ಥಳೀಯವಾಗಿ ತಯಾರಿಸಿದ ಮದ್ಯವನ್ನು ಸೇವಿಸಿದ್ದರು ಎನ್ನಲಾಗಿದೆ. ಇದರಲ್ಲಿ ಮೆಥನಾಲ್ ಎಂಬ ವಿಷಕಾರಿ ಅಂಶ ಬೆರೆತಿದ್ದರಿಂದ ಅನೇಕರು ಅಸ್ವಸ್ಥಗೊಂಡಿದ್ದಾರೆ. ಬಾಧಿತರಲ್ಲಿ ಯುವಕರಿಂದ ಹಿಡಿದು ಮಧ್ಯವಯಸ್ಕರವರೆಗೆ ಸ್ಥಳೀಯ ನಿವಾಸಿಗಳೇ ಹೆಚ್ಚಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆ
ಅಸ್ವಸ್ಥಗೊಂಡವರನ್ನು ಇಂಫಾಲದ ಶಿಜಾ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಬಬಿನಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇನ್ನೂ ಹಲವು ರೋಗಿಗಳನ್ನು ಹೊತ್ತ ಬಸ್‌ಗಳು ಆಸ್ಪತ್ರೆಯತ್ತ ಬರುತ್ತಿದ್ದು, ಸಾವು-ನೋವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಶಿಜಾ ಆಸ್ಪತ್ರೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಡಾ. ಚೇತನ್ ಹುಂಡೋಂಗ್‌ಬಾಮ್, “ನಮ್ಮ ಆಸ್ಪತ್ರೆಗೆ ಇಲ್ಲಿಯವರೆಗೆ 140 ರೋಗಿಗಳು ದಾಖಲಾಗಿದ್ದು, ಅವರಲ್ಲಿ ಒಬ್ಬರು ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದರು. ಮೂವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು, ಅವರಿಗೆ ಕಿಡ್ನಿ ಶುದ್ಧೀಕರಣ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆ ಎದುರಾಗಿರುವುದರಿಂದ, ಸಾಮಾನ್ಯ ರೋಗಿಗಳನ್ನು RIMS ಮತ್ತು GENIMS ಆಸ್ಪತ್ರೆಗಳಿಗೆ ಸ್ಥಳಾಂತರಿಸಿ, ಗಂಭೀರ ಸ್ಥಿತಿಯಲ್ಲಿರುವವರಿಗೆ ಇಲ್ಲಿಯೇ ಜೀವರಕ್ಷಕ ಚಿಕಿತ್ಸೆ ಮುಂದುವರಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.
ಆಸ್ಪತ್ರೆಗೆ ಸಿಎಂ ಭೇಟಿ, ಆರ್ಥಿಕ ನೆರವಿನ ಭರವಸೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಣಿಪುರ ಮುಖ್ಯಮಂತ್ರಿ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಶಿಜಾ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಮತ್ತು ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ, ಆರೋಗ್ಯ ಇಲಾಖೆಯಿಂದ ಎಲ್ಲಾ ರೀತಿಯ ವೈದ್ಯಕೀಯ ಸೌಲಭ್ಯ ಹಾಗೂ ಸಂತ್ರಸ್ತರಿಗೆ ಸೂಕ್ತ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ವಿಷಕಾರಿ ಮದ್ಯ ಎಲ್ಲಿಂದ ಪೂರೈಕೆಯಾಗಿದೆ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ.



