November 21, 2026
Saturday, November 21, 2026
spot_img

ಕಲ್ಲುಬಂಡೆಯನ್ನೂ ಕರಗಿಸುವ ಶಕ್ತಿ ನಮಗಿದೆ : ಐದನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಐದು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತೆಯರು, ಬೇಡಿಕೆ ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ತಮಗೆ ಮಾಸಿಕ 15 ಸಾವಿರ ರೂಪಾಯಿ ಗೌರವಧನ ನೀಡುವ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಹಾಗೂ ಅದರ ಪ್ರತಿಯನ್ನು ನೀಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ಆಶಾ ಕಾರ್ಯಕರ್ತೆಯರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಐದು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಮುಖ್ಯಮಂತ್ರಿ ತಮ್ಮ ಆರೋಗ್ಯ ವಿಚಾರಿಸಲು ಸ್ಥಳಕ್ಕೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇಲ್ಲವೇ ಎಂದು ಪ್ರಶ್ನಿಸಿರುವ ಅವರು, ತಮ್ಮ ಬೇಡಿಕೆಗಳನ್ನು ಈಡೇರಿಸುವುದಿರಲಿ, ಸೌಜನ್ಯಕ್ಕಾದರೂ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲ್ಲುಬಂಡೆಯಂತಿರಬಹುದು. ಆದರೆ ನಮ್ಮ ಹೋರಾಟಕ್ಕೆ ಆ ಕಲ್ಲುಬಂಡೆಯನ್ನೂ ಕರಗಿಸುವ ಶಕ್ತಿಯಿದೆ. ನಮ್ಮ ಹೋರಾಟ ಆ ಕಲ್ಲುಬಂಡೆಯನ್ನು ಕೆತ್ತಿ ಮೂರ್ತಿಯನ್ನಾಗಿ ಮಾಡುತ್ತದೆ. ಮುಖ್ಯಮಂತ್ರಿಗಳು ನಮ್ಮ ಸಮಸ್ಯೆಗಳನ್ನು ಬಗೆಹರಿಸಿ ಜನರ ಮೆಚ್ಚುಗೆಗೆ ಪಾತ್ರರಾಗಬೇಕು. ಇಲ್ಲವಾದರೆ ಹೋರಾಟ ಮುಂದುವರಿಯಲಿದೆ ಎಂದು ಕಾರ್ಯಕರ್ತೆಯರು ಎಚ್ಚರಿಸಿದ್ದಾರೆ.

15 ಸಾವಿರ ರೂಪಾಯಿ ಮಾಸಿಕ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಬೀದಿಗಿಳಿದಿದ್ದಾರೆ. ಸರ್ಕಾರದಿಂದ ಅಧಿಕೃತ ಆದೇಶದ ಪ್ರತಿ ಕೈಗೆ ಸಿಗುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ

Must Read