ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಕಲಬೆರಕೆ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಕಲಬೆರಕೆ ಮದ್ಯ ಸೇವಿಸಿ 180ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ನ.18ರಿಂದ ಎರಡು ದಿನದಲ್ಲಿಯೇ 14 ಮಂದಿ ಮೃತಪಟ್ಟಿದ್ದಾರೆ. ಇಂದು ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇಂಫಾಲ್‌ನ ವಿವಿಧ ಆಸ್ಪತ್ರೆಗಳಲ್ಲಿ ಅಸ್ವಸ್ಥರು ಚಿಕಿತ್ಸೆ ಪಡೆಯುತ್ತಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಮೃತರ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಯುಮ್ನಮ್ ಖೇಮಚಂದ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಅಲ್ಲದೇ ರೋಗಿಗಳಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆ ಮತ್ತು ಅಗತ್ಯವಿರುವ ಎಲ್ಲಾ ಬೆಂಬಲವನ್ನು ಖಚಿತಪಡಿಸಿಕೊಳ್ಳುವಂತೆ ಅವರು ಆಸ್ಪತ್ರೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮದ್ಯ ಕಲಬೆರಕೆ ಆಗಿದ್ದು ಹೇಗೆ? ಅದನ್ನು ಕುಡಿದು ಕೆಲವರು ಮೃತಪಟ್ಟ ಸುದ್ದಿ ತಿಳಿದರೂ ಮತ್ತೆ ಜನ ಕುಡಿದಿದ್ದು ಯಾಕೆ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



