ಹೊಸದಿಗಂತ ವರದಿ ಬೆಳಗಾವಿ:
ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸುವುದರ ಜತೆಗೆ ಉತ್ತರ ಕರ್ನಾಟಕದ ಸಮಸ್ಯೆಗಳು ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿ ವಿಚಾರಗಳ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ ಹಾಗೂ ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ತಿಳಿಸಿದರು.
ಶನಿವಾರ ಸುವರ್ಣವಿಧಾನಸೌಧದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಾಧ್ಯಕ್ಷ ಜಿ.ಎಸ್.ಪಾಟೀಲ ಹಾಗೂ ವಿಧಾನಪರಿಷತ್ತಿನ ಸಭಾಪತಿ ಸಲೀಂ ಅಹಮದ್ ಅಧಿವೇಶನದ ಪೂರ್ವಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಅವರು, ಶಾಸಕರ ವಸತಿ, ಊಟೋಪಹಾರ, ಸಾರಿಗೆ, ಭದ್ರತೆ, ವಿದ್ಯುತ್ ಹಾಗೂ ಅಂತರ್ಜಾಲ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದರು.
ಅಧಿವೇಶನದ ಸಂದರ್ಭದಲ್ಲಿ ಪುಸ್ತಕ ಮೇಳ, ಯೋಗಾಭ್ಯಾಸ, ಶಾಲಾ ಮಕ್ಕಳೊಂದಿಗೆ ಕೃತಕ ಬುದ್ಧಿಮತ್ತೆ (ಎಐ) ಮೂಲಕ ಸಂವಾದ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಹೊಸ ಪ್ರಯತ್ನಗಳಿಗೂ ಯೋಜನೆ ರೂಪಿಸಲಾಗಿದೆ.
ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಭಿವೃದ್ಧಿ ವಿಷಯಗಳ ಚರ್ಚೆಗೆ ಸದನದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು. ಕಲಾಪದ ಘನತೆ ಹಾಗೂ ಸುಗಮ ನಿರ್ವಹಣೆಗೆ ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಸಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಶಾಸಕರ ಭವನದ ಮಾದರಿಯಲ್ಲಿ ಕಟ್ಟಡ ನಿರ್ಮಿಸುವ ಚಿಂತನೆಯಿದ್ದು, ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲದೆ, ಪ್ರತಿ ತಿಂಗಳು ಒಂದು ಸದನ ಸಮಿತಿಯ ಸಭೆಯನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸುವ ಉದ್ದೇಶವೂ ಇದೆ ಎಂದು ವಿಧಾನಸಭಾಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.
ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ವಿಶೇಷ ಆದ್ಯತೆ: ಸಲೀಂ ಅಹಮದ್
ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ಮಾತನಾಡಿ, ಅಧಿವೇಶನದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯ ಜತೆಗೆ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳು ಒಗ್ಗೂಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರ್ಥಪೂರ್ಣ ಕಲಾಪ ನಡೆಸಲು ಆದ್ಯತೆ ನೀಡಲಾಗುವುದು ಎಂದರು.
ಪ್ರತಿಭಟನೆಗಳು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಪ್ರತಿಭಟನೆಗೂ ಮುನ್ನ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಚರ್ಚೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ. ಪ್ರತಿಭಟನೆಗಳಿಂದ ಸದನದ ಕಲಾಪಗಳಿಗೆ ಅಡ್ಡಿಯಾಗದಂತೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ:
ಸರ್ಕಾರ ಹಾಗೂ ವಿರೋಧ ಪಕ್ಷಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಸದನದಲ್ಲಿ ಚರ್ಚಿಸಬೇಕಾದ ಪ್ರಮುಖ ವಿಷಯಗಳನ್ನು ನಿರ್ಧರಿಸಲಾಗುವುದು. ಶಾಸಕರ ಹಾಜರಾತಿ ಹೆಚ್ಚಳಕ್ಕೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಶಾಸಕರ ಭವನ ನಿರ್ಮಾಣದ ಪ್ರಸ್ತಾವನೆಯನ್ನೂ ಗಂಭೀರವಾಗಿ ಪರಿಗಣಿಸಲಾಗಿದ್ದು, ವಿಸ್ತೃತ ಚರ್ಚೆಯ ಬಳಿಕ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಕೆ. ಪೊಲೀಸ್ ಆಯುಕ್ತ ಪ್ರಕಾಶ ನಿಕ್ಕಂ, ಜಿಲ್ಲಾಪಂಚಾಯತ ಸಿಇಓ ರಾಹುಲ್ ಶಿಂದೆ, ಸೇರಿದಂತೆ ಇತರರು ಇದ್ದರು.



