November 22, 2026
Sunday, November 22, 2026
spot_img

ಯಾತ್ರೆ ಮುಗಿಸಿ ಮರಳುತ್ತಿದ್ದವರ ಮೇಲೆ ಜವರಾಯನ ಅಟ್ಟಹಾಸ: ಒಂದೇ ಕುಟುಂಬದ 9 ಮಂದಿ ಸಾ*ವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ:

ದೇವರ ದರುಶನ ಪಡೆದು ಸಂತಸದಿಂದ ಮನೆಗೆ ಮರಳುತ್ತಿದ್ದ ಒಂದೇ ಕುಟುಂಬದ ಒಂಬತ್ತು ಮಂದಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಕೋಟಾ ಜಿಲ್ಲೆಯ ಶಂಭುಪುರ ಬಳಿಯ ಕೋಟಾ-ಉದಯಪುರ ಹೆದ್ದಾರಿಯಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 16 ಮಂದಿ ಪ್ರಸಿದ್ಧ ಯಾತ್ರಾಸ್ಥಳವಾದ ಖಾಟು ಶ್ಯಾಮ್ ದರ್ಶನವನ್ನು ಮುಗಿಸಿಕೊಂಡು ತಮ್ಮ ಊರಿಗೆ ವಾಪಸಾಗುತ್ತಿದ್ದರು. ಮಧ್ಯರಾತ್ರಿ ಎಲ್ಲರೂ ನಿದ್ದೆಯ ಮಂಪರಿನಲ್ಲಿದ್ದಾಗ, ವೇಗವಾಗಿ ಬಂದ ಇವರ ವಾಹನ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಂಬತ್ತು ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:

ಈ ಕುರಿತು ಪ್ರತಿಕ್ರಿಯಿಸಿರುವ ಕೋಟಾ ಹೆಚ್ಚುವರಿ ಜಿಲ್ಲಾಧಿಕಾರಿ ರಾಜೇಶ್ ಜೋಶಿ, “ಮಧ್ಯರಾತ್ರಿ ಶಂಭುಪುರ ಬಳಿ 16 ಜನರಿದ್ದ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತಪಟ್ಟವರೆಲ್ಲರೂ ಮಹಾರಾಷ್ಟ್ರದ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಯಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದರು” ಎಂದು ತಿಳಿಸಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಿ ಅವರ ಪ್ರಾಣ ಉಳಿಸುವುದು ಸದ್ಯ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Must Read

Skip to toolbar