November 23, 2026
Monday, November 23, 2026
spot_img

ಬರ ಪರಿಹಾರಕ್ಕೆ ಕೇಂದ್ರದ ಮೌನ; ಜವಾಬ್ದಾರಿಯುತ ಸರ್ಕಾರ ಪತ್ರ ಬರೆದಾಗ ಸ್ಪಂದಿಸಬೇಕು: ಡಿಸಿಎಂ ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಬರ ಪರಿಹಾರದ ಅನುದಾನ ಬಿಡುಗಡೆಗೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿಯುತ ರಾಜ್ಯ ಸರ್ಕಾರವೊಂದು ನೆರವು ಕೋರಿ ಕೇಂದ್ರ ಸಚಿವಾಲಯಕ್ಕೆ ಪತ್ರ ಬರೆದಾಗ, ಕೇಂದ್ರ ಸರ್ಕಾರ ಅದಕ್ಕೆ ಸ್ಪಂದಿಸುವ ಕನಿಷ್ಠ ಸೌಜನ್ಯ ತೋರಬೇಕು ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪತ್ತು ನಿರ್ವಹಣಾ ಖಾತೆ ನೋಡಿಕೊಳ್ಳುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಭೇಟಿಗೆ ಸಮಯ ಕೋರಲಾಗಿದೆ. ಆದರೆ ಯಾವುದೇ ಕಚೇರಿಯಿಂದಲೂ ಇದುವರೆಗೆ ಉತ್ತರ ಬಂದಿಲ್ಲ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ಸಂಪುಟದಲ್ಲಿ ಚರ್ಚೆ

ಕಳೆದ ಎರಡು ತಿಂಗಳಿನಿಂದ ಕೇಂದ್ರ ಸರ್ಕಾರ ಮೌನ ವಹಿಸಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ಚಿಂತನೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, “ಇನ್ನಷ್ಟು ದಿನ ಕಾದು ನೋಡುತ್ತೇವೆ. ಬಳಿಕ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಕಳೆದ ಬಾರಿಯೂ ಸುಪ್ರೀಂ ಕೋರ್ಟ್ ನಿರ್ದೇಶನದ ಬಳಿಕವೇ ಕೇಂದ್ರವು 3,500 ಕೋಟಿ ಪರಿಹಾರ ನೀಡಿತ್ತು” ಎಂದು ನೆನಪಿಸಿದರು.

ಕುಮಾರಸ್ವಾಮಿ ನಮಗೆ ಭೇಟಿಗೆ ಸಮಯ ಕೊಡಿಸಲಿ

ರಾಜ್ಯ ಸರ್ಕಾರ ಕೇವಲ ರಾಜಕೀಯ ಮಾಡುವ ಬದಲು ಸಂಬಂಧಪಟ್ಟ ಕೇಂದ್ರ ಸಚಿವರ ಭೇಟಿಗೆ ಸಮಯ ಕೇಳಬಹುದಿತ್ತು ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ, “ಅವರು ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ. ರಾಜ್ಯದ ಸಮಸ್ಯೆ ಅವರ ಸಮಸ್ಯೆಯೂ ಹೌದು. ಹಾಗಾಗಿ ಕುಮಾರಸ್ವಾಮಿ ಅವರೇ ಮುಂದೆ ನಿಂತು ನಮಗೆ ಕೇಂದ್ರ ಗೃಹ ಸಚಿವರ ಭೇಟಿಗೆ ಸಮಯ ಕೊಡಿಸಲಿ” ಎಂದರು. ಕುಡಿಯುವ ನೀರಿನ ವ್ಯವಸ್ಥೆಗಾಗಿ ರಾಜ್ಯ ಸರ್ಕಾರ ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ಬಿಡುಗಡೆ ಮಾಡಿದ್ದು, ಅಗತ್ಯವಿದ್ದರೆ ಮತ್ತೆ 1 ಕೋಟಿ ನೀಡಲು ಸಿದ್ಧವಿದೆ ಎಂದು ಅವರು ಮಾಹಿತಿ ನೀಡಿದರು.

Must Read

Skip to toolbar