ಹೊಸದಿಗಂತ ವರದಿ ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಡೆಯುತ್ತಿರುವ ಎಸ್ಐಟಿ ಮರು ತನಿಖೆ ದಿನದಿಂದ ದಿನಕ್ಕೆ ಮತ್ತಷ್ಟು ಆಯಾಮ ಪಡೆದುಕೊಳ್ಳುತ್ತಿದ್ದು, ಇದೀಗ ಸೌಜನ್ಯ ಪರ ಹೋರಾಟಗಾರರಿಂದಲೂ ಸಮಗ್ರ ಮಾಹಿತಿ ಸಂಗ್ರಹಿಸುತ್ತಿದೆ.
ವಿಚಾರಣೆಗೆ ಹಾಜರಾಗುವಂತೆ ಗಿರೀಶ್ ಮಟ್ಟೆಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರಿಗೆ ಈಗಾಗಲೇ ತನಿಖಾ ತಂಡ ನೋಟೀಸ್ ಜಾರಿ ಮಾಡಿದೆ ಎನ್ನಲಾಗಿದ್ದು, ಸೋಮವಾರ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಎಸ್ಐಟಿ ಕಚೇರಿಗೆ ಸೌಜನ್ಯಾ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ್ ಅವರು ಆಗಮಿಸಿ ವಿಚಾರಣೆ ಎದುರಿಸಿದ್ದಾರೆ. ಬಹಳಷ್ಟು ದಾಖಲೆಗಳ ಸಹಿತ ಆಗಮಿಸಿದ ಮಟ್ಟೆಣ್ಣನವರ್, ಕೆಲವು ತಾಸುಗಳ ಕಾಲ ಎಸ್ಐಟಿ ಕಚೇರಿಯಲ್ಲಿದ್ದು ವಿಚಾರಣೆ ಎದುರಿಸಿದ್ದಾರೆ.
ಇದನ್ನೂ ಓದಿ:
14 ವರ್ಷ ಹಿಂದಿನ ಪ್ರಕರಣ ಇದಾಗಿದ್ದು, ಸೌಜನ್ಯಾ ಕೊಲೆ ಪ್ರಕರಣದಲ್ಲಿ ವಿವಿಧ ತನಿಖಾ ಸಂಸ್ಥೆಗಳು ವಿಚಾರಣೆ ನಡೆಸಿದ್ದರೂ ಇನ್ನೂ ಆರೋಪಿಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮರುತನಿಖೆಗೆ ಆದೇಶ ನೀಡಿದ್ದು, ಮೂರು ತಿಂಗಳ ಕಾಲಾವಕಾಶ ನೀಡಿದೆ.
ಹಿರಿಯ ಐಪಿಎಸ್ ಅಧಿಕಾರಿ ಚೇತನ್ಸಿಂಗ್ ರಾಥೋಡ್ ನೇತೃತ್ವದಲ್ಲಿ ವಿವಿಧ ಆಯಾಮಗಳಲ್ಲಿ ಎಸ್ಐಟಿ ಈ ಪ್ರಕರಣದ ಸಮಗ್ರ ತನಿಖೆ ನಡೆಸುತ್ತಿದ್ದು, ಈಗಾಗಲೇ ಸೌಜನ್ಯ ಅವರ ತಾಯಿ ಕುಸುಮಾವತಿ, ಮನೆಮಂದಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಜೊತೆಗೆ ಸೌಜನ್ಯ ಶವ ಪತ್ತೆಯಾದ ಸ್ಥಳದಲ್ಲಿಯೂ ಶೋಧ ನಡೆಸಿ ಮಾಹಿತಿ ಸಂಗ್ರಹಿಸಿದೆ.



