ಹೊಸದಿಗಂತ ವರದಿ ಮಂಗಳೂರು:
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿಗೆ ತಮ್ಮ ಬಳಿ ಇದ್ದ ದಾಖಲೆಗಳನ್ನು ನೀಡಿದ್ದೇನೆ. ತನಿಖೆ ನಡೆಸುತ್ತಿರುವ ಎಸ್‌ಐಟಿ ಸೌಜನ್ಯಳಿಗೆ ನ್ಯಾಯ ಒದಗಿಸಿ ಕೊಡುತ್ತದೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದು ಸೌಜನ್ಯಾ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ್ ಹೇಳಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸೋಮವಾರ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾದ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಇದನ್ನೂ ಓದಿ:
ಕಳೆದ 14 ವರ್ಷದಿಂದ ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಮಾಡಿದ್ದೇವೆ. ನನ್ನ ಬಳಿಯಲ್ಲಿ ಇದ್ದ ಸಂಪೂರ್ಣವಾಗಿ ವಿವರವನ್ನು ಅಧಿಕಾರಿಗಳಿಗೆ ನೀಡಿದ್ದೇನೆ. ತನಿಖಾಧಿಕಾರಿಗಳು ಸಣ್ಣ ಎಳೆಯನ್ನೂ ಬಿಡದೆ ತನಿಖೆ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆ ಬಗ್ಗೆ ಸಂಪೂರ್ಣ ನಂಬಿಕೆಯಿದೆ ಎಂದು ಅವರು ಪುನರುಚ್ಚರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇವಲ 90 ದಿನ ಕಾಲಾವಕಾಶದಲ್ಲಿ ತನಿಖೆ ಮಾಡಲು ಸಾಧ್ಯವಿಲ್ಲ. ತನಿಖಾಧಿಕಾರಿಗಳು ಹೆಚ್ಚುವರಿ ಸಮಯ ತೆಗೆದುಕೊಂಡರೂ ನಮ್ಮ ಯಾವುದೇ ಆಕ್ಷೇಪ ಇಲ್ಲ. ಬೇಕಿದ್ದರೆ ಇನ್ನೂ ಮೂರು ತಿಂಗಳು ಪಡೆಯಲಿ ನಮ್ಮ ಅಭ್ಯಂತರ ಇಲ್ಲ. ಈ ಪ್ರಕರಣ ಸರಿಯಾದ ದಿಕ್ಕಿನಲ್ಲಿ ತನಿಖೆಯಾಗುತ್ತಿರುವುದು ಸಮಾಧಾನದ ಸಂಗತಿ ಎಂದರು.



