ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಸದ್ಯ ಚಳಿಯ ಅಬ್ಬರ ಜೋರಾಗಿದ್ದು, ಮುಂಜಾನೆ ಮತ್ತು ರಾತ್ರಿಯ ವೇಳೆ ಜನರು ನಡುಗುವಂತಾಗಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಚಳಿಯ ತೀವ್ರತೆಯ ನಡುವೆಯೇ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆಗಮನವಾಗುವ ಮುನ್ಸೂಚನೆ ಸಿಕ್ಕಿದೆ.
ರಾಜ್ಯದ ಬಯಲು ಪ್ರದೇಶಗಳಲ್ಲಿ ಚಳಿಯ ಪ್ರಮಾಣ ತೀವ್ರವಾಗಿದ್ದು, ಬೆಳಗಾವಿಯಲ್ಲಿ ರಾಜ್ಯದಲ್ಲೇ ಅತ್ಯಂತ ಕಡಿಮೆ ಅಂದರೆ 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸಂಪೂರ್ಣ ಒಣ ಹವೆ ಮುಂದುವರಿಯಲಿದ್ದು, ಚಳಿಯ ವಾತಾವರಣ ಯಥಾಸ್ಥಿತಿಯಲ್ಲಿರಲಿದೆ.
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದರಿಂದಾಗಿ ಸಿಲಿಕಾನ್ ಸಿಟಿ ಮಂದಿಗೆ ಚಳಿಯ ನಡುವೆಯೇ ಮಳೆಯ ವಾತಾವರಣದ ಅನುಭವವಾಗಲಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನವೆಂಬರ್ 24ರಂದು ಅಲ್ಲಲ್ಲಿ ಹಗುರ ಮಳೆಯಾಗಬಹುದು. ಆದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಇತ್ತ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದು, ಮುಖ್ಯವಾಗಿ ಒಣ ಹವೆ ಇರಲಿದೆ.
ಒಟ್ಟಾರೆಯಾಗಿ, ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಕರ್ನಾಟಕದ ಜನರು ಮನೆಯಿಂದ ಹೊರಬರುವಾಗ ಬೆಚ್ಚಗಿನ ಉಡುಪುಗಳ ಜೊತೆಗೆ ಕೊಡೆಯನ್ನೂ ಜೊತೆಯಲ್ಲಿಟ್ಟುಕೊಳ್ಳುವುದು ಉತ್ತಮ.



