November 24, 2026
Tuesday, November 24, 2026
spot_img

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸಾ*ವು, ನಾಲ್ವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್‌ ಬಳಿ ಸರಕು ಸಾಗಣೆ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ದೇವಸ್ಥಾನಕ್ಕೆ ಹೊರಟಿದ್ದ ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ರಿತ್ವಿಕಾ ಮೃತರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಮುಂದೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಕಾರು ಹಿಂದಿನಿಂದ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮಹದೇವು ಹಾಗೂ ಎಂಟು ವರ್ಷದ ಬಾಲಕಿ ರಿತ್ವಿಕಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ಕುಟುಂಬ ದೇವರ ದರುಶನ ಪಡೆದು ನಂತರ ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ಕೆಲವೇ ಸಮಯದಲ್ಲಿ ಕುಟುಂಬದ ಪ್ರವಾಸ ದುರಂತದಲ್ಲಿ ಅಂತ್ಯಗೊಂಡಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ದುಃಖ ಮೂಡಿಸಿದೆ.

Must Read