November 24, 2026
Tuesday, November 24, 2026
spot_img

ಡಿ.3ರಂದು ವಿಜಯೇಂದ್ರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ: ಬಾಲಚಂದ್ರ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ:

ಉತ್ತರ ಕರ್ನಾಟಕದ ಅಭಿವೃದ್ಧಿ, ರೈತರ ಸಮಸ್ಯೆಗಳು, ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ, ಡಿ.3ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳಿಗೆ ರಾಜ್ಯ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ರೈತರು, ಆಶಾ ಕಾರ್ಯಕರ್ತೆಯರು, ನೀರಾವರಿ ಯೋಜನೆಗಳು ಸೇರಿದಂತೆ ಹಲವು ಜನಪರ ವಿಚಾರಗಳು ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಸರ್ಕಾರದ ಗಮನ ಸೆಳೆಯಲು ಅಧಿವೇಶನದ ಸಂದರ್ಭದಲ್ಲಿ ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದರು.

ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಮುಖ್ಯಮಂತ್ರಿ ಅವರೇ ಹೇಳುತ್ತಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ರಾಜ್ಯದಲ್ಲಿ ಹಲವು ಸಮಸ್ಯೆಗಳು ತಲೆದೋರಿದ್ದರೂ ಅವುಗಳ ಪರಿಹಾರಕ್ಕೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕಬ್ಬು ಬೆಳೆಗಾರರು ಸೇರಿದಂತೆ ವಿವಿಧ ಬೆಳೆಗಳ ರೈತರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಅವರ ಸಂಕಷ್ಟಗಳಿಗೆ ಸೂಕ್ತ ಪರಿಹಾರ ಕಲ್ಪಿಸುತ್ತಿಲ್ಲ. ರೈತರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸುವುದರ ಜತೆಗೆ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಹಲವು ನೀರಾವರಿ ಯೋಜನೆಗಳು ಅನುದಾನದ ಕೊರತೆಯಿಂದ ವಿಳಂಬವಾಗುತ್ತಿದ್ದು, ಉತ್ತರ ಕರ್ನಾಟಕದ ಕೃಷಿ ಹಾಗೂ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಆರೋಪಿಸಿದರು. ಆರೋಗ್ಯ ವ್ಯವಸ್ಥೆಯ ಪ್ರಮುಖ ಅಂಗವಾಗಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೂ ಸರ್ಕಾರ ಸ್ಪಂದಿಸಬೇಕಿದೆ. ಅವರ ಸೇವೆ ಹಾಗೂ ಶ್ರಮಕ್ಕೆ ತಕ್ಕ ಗೌರವ ಮತ್ತು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರಗಳು ವಿಧಾನಮಂಡಲದಲ್ಲಿ ಸಮರ್ಪಕವಾಗಿ ಚರ್ಚೆಯಾಗುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಭಾಗದ ಜನರ ಸಮಸ್ಯೆಗಳು, ಅಭಿವೃದ್ಧಿ ಯೋಜನೆಗಳು ಹಾಗೂ ಮೂಲಸೌಕರ್ಯಗಳ ಕುರಿತು ಅಧಿವೇಶನದಲ್ಲಿ ಬಿಜೆಪಿ ಬಲವಾಗಿ ಧ್ವನಿ ಎತ್ತಲಿದೆ ಎಂದರು.
ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ಅವರು ಉತ್ತರ ಕರ್ನಾಟಕದ ಅಭಿವೃದ್ಧಿಗೆ ನೀಡಿದ ಕೊಡುಗೆ ಹಾಗೂ ಅವರ ಪ್ರಯತ್ನಗಳನ್ನು ಇಂದಿಗೂ ಜನರು ಸ್ಮರಿಸುತ್ತಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.

Must Read