ಹೊಸದಿಗಂತ ವರದಿ ಕಲಬುರಗಿ:
ಕೇಂದ್ರ ರಕ್ಷಣಾ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ರಾಜನಾಥ್ ಸಿಂಗ್ ಅವರು ನ.25ರಂದು ನಾಳೆ ಬುಧವಾರ ಕಲಬುರಗಿ ನಗರಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ಹಮ್ಮಿಕೊಂಡಿರುವ ‘ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ಅಭಿಯಾನದಡಿ ನಡೆಯಲಿರುವ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಂಡು ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬಿಜೆಪಿ ದೇಶಾದ್ಯಂತ ಈ ಅಭಿಯಾನ ಹಮ್ಮಿಕೊಂಡಿದೆ. ಇದರ ಭಾಗವಾಗಿ ಕಲಬುರಗಿಯಲ್ಲಿ ನಡೆಯಲಿರುವ ಪಾದಯಾತ್ರೆಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ.
ನಗರದ ಸೂಪರ್ ಮಾರ್ಕೆಟ್ನ ಕಾಮತ್ ಹೋಟೆಲ್,ನಿಂದ ಪಾದಯಾತ್ರೆ ಆರಂಭವಾಗಿ ಜಗತ್ ವೃತ್ತದವರೆಗೆ ಸಾಗಲಿದೆ. ಬಳಿಕ ಜಗತ್ ವೃತ್ತದಿಂದ ಯಲ್ಲಮ್ಮ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ನಿರ್ಮಿಸಿರುವ ವೇದಿಕೆಯಲ್ಲಿ ಬಹಿರಂಗ ಸಭೆ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಪಾದಯಾತ್ರೆ ಆರಂಭಿಸಲು ಉದ್ದೇಶಿಸಲಾಗಿದೆ.
ಇದನ್ನೂ ಓದಿ:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ರಾಜ್ಯ, ವಿಭಾಗ ಹಾಗೂ ಜಿಲ್ಲಾ ಮಟ್ಟದ ಪ್ರಮುಖ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಸುಮಾರು 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ನಗರಾಧ್ಯಕ್ಷ ಚಂದು ಪಾಟೀಲ್ ಜಂಟಿಯಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ದೇಶದ ವಿವಿಧ ಪ್ರಮುಖ ಸ್ಥಳಗಳಲ್ಲಿ ಪ್ರಜಾಪ್ರಭುತ್ವದ ಸಂರಕ್ಷಣೆ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಅಭಿಯಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಕಲಬುರಗಿಯನ್ನು ಆಯ್ಕೆ ಮಾಡಿಕೊಂಡಿರುವುದು ರಾಜಕೀಯವಾಗಿ ಮಹತ್ವ ಪಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಯಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ ಹಾಗೂ ಬಹಿರಂಗ ಸಭೆ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.



