ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಹಾಸನದಿಂದ ಬೆಂಗಳೂರಿನ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾದರಾದರೂ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಸಹ ಅವರು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಆರೋಪ ತಳ್ಳಿಹಾಕಿದ್ದ ಡಿಸಿ-ಪಿಎ
ಕುಮಾರಸ್ವಾಮಿ ಅವರ ಆರೋಪವನ್ನು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಸಾರಾಸಗಟಾಗಿ ತಳ್ಳಿಹಾಕಿದ್ದರು. “ನನ್ನ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸಂಪೂರ್ಣ ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ನನ್ನ ಪಿಎ ತಿಳಿಸಿದ್ದಾರೆ. ಈ ಬಗ್ಗೆ ತನಿಖೆಯಾಗಲಿ, ನಾನು ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದರು.
ಇದನ್ನೂ ಓದಿ:
ಮತ್ತೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, “ನನ್ನ ಹೆಸರು ಮತ್ತು ಫೋನ್ ನಂಬರ್ ಬಳಸಿ ಎಐ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್ ಸೃಷ್ಟಿಸಿ ವೈರಲ್ ಮಾಡಲಾಗಿದೆ” ಎಂದು ಆರೋಪಿಸಿದ್ದರು.
ಎಫ್‌ಐಆರ್ ದಾಖಲು. ನೋಟಿಸ್ ಜಾರಿ
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ನಕಲಿ ಚಾಟ್‌ಗಳ ಮೂಲದ ಕುರಿತು ತನಿಖೆ ನಡೆಸುತ್ತಿರುವ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು, ಈ ಸಂಬಂಧ ಮಾಹಿತಿ ಪಡೆಯಲು ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.



