ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಪಿಐಎಫ್ ಟವರ್ ಮೇಲೆ ಹೌತಿ ಬಂಡುಕೋರರು ನಡೆಸಿದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ.
ಸೌದಿ ಅರೇಬಿಯಾದ ನಾಗರಿಕ, ಆರ್ಥಿಕ ಮತ್ತು ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳನ್ನು ತಕ್ಷಣವೇ ನಿಲ್ಲಿಸುವಂತೆ ಭಾರತ ಆಗ್ರಹಿಸಿದೆ. ಇದೇ ವೇಳೆ, ಪ್ರಾದೇಶಿಕ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೂ ಸೌದಿ ಅರೇಬಿಯಾಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಮಂಗಳವಾರ ರಿಯಾದ್‌ನ ಕಿಂಗ್ ಅಬ್ದುಲ್ಲಾ ಹಣಕಾಸು ಜಿಲ್ಲೆ (KAFD)ಯಲ್ಲಿರುವ ಪಿಐಎಫ್ ಟವರ್ ಮೇಲೆ ನಡೆದ ದಾಳಿಯನ್ನು ಖಂಡಿಸಿದೆ.
ಸೌದಿ ಅರೇಬಿಯಾದ ನಾಗರಿಕ, ಆರ್ಥಿಕ ಮತ್ತು ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಯುತ್ತಿರುವ ದಾಳಿಗಳು ಕಳವಳಕಾರಿ ಎಂದು ಹೇಳಿರುವ ಸಚಿವಾಲಯ, ಇಂತಹ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ.
ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯ ಅಗತ್ಯವನ್ನು ಒತ್ತಿಹೇಳಿರುವ ಭಾರತ, ಸೌದಿ ಅರೇಬಿಯಾದೊಂದಿಗೆ ತನ್ನ ಒಗ್ಗಟ್ಟು ಮತ್ತು ಬೆಂಬಲವನ್ನು ಮುಂದುವರಿಸುವುದಾಗಿ ಸ್ಪಷ್ಟಪಡಿಸಿದೆ.



