November 26, 2026
Thursday, November 26, 2026
spot_img

ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿಯಾಗಿ ಭೀಕರ ದುರಂತ: 31 ಸಾವು, 21 ಮಂದಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈಜಿಪ್ಟ್ ರಾಜಧಾನಿ ಕೈರೋ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 31 ಮಂದಿ ಸಜೀವ ದಹನವಾಗಿದ್ದು, 21 ಜನರು ಗಾಯಗೊಂಡಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಸಾಗಿಸುತ್ತಿದ್ದ ವಾಹನವೊಂದು ಉರುಳಿಬಿದ್ದ ಪರಿಣಾಮ ಭಾರಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.

ಕೈರೋ ಸಮೀಪದ ಗಿಜಾದ ಅಲ್-ವಾರಾಕ್ ಪ್ರದೇಶದಲ್ಲಿ ನಗರದ ಮುಖ್ಯ ರಿಂಗ್ ರಸ್ತೆಯ ಸುರಂಗದ ಮೇಲ್ಭಾಗದಲ್ಲಿ ಬುಧವಾರ ಈ ಅಪಘಾತ ಸಂಭವಿಸಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಬೆನ್ನಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಸುತ್ತಮುತ್ತಲಿನ ವಾಹನಗಳಿಗೂ ವ್ಯಾಪಿಸಿದೆ. ಪರಿಣಾಮ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಈಜಿಪ್ಟ್ ಅಧಿಕಾರಿಗಳ ಪ್ರಾಥಮಿಕ ತನಿಖೆಯ ಪ್ರಕಾರ, ಕಾರುಗಳು ಮತ್ತು ಮೋಟಾರ್‌ಸೈಕಲ್‌ಗಳು ಸೇರಿದಂತೆ ಒಟ್ಟು 27 ವಾಹನಗಳು ಬೆಂಕಿಯಲ್ಲಿ ಸುಟ್ಟು ನಾಶವಾಗಿವೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ, ಹಲವು ವಾಹನಗಳಲ್ಲಿದ್ದವರಿಗೆ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡಿದ್ದಾರೆ. ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, 21 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನಾ ಸ್ಥಳದಲ್ಲಿದ್ದ ಅಲಿ ಯೂಸುಫ್ ಎಂಬುವವರು ರಾಯಿಟರ್ಸ್ ಸುದ್ದಿಸಂಸ್ಥೆಗೆ ನೀಡಿದ ಮಾಹಿತಿ ಪ್ರಕಾರ, ಹಲವು ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಜನರು ವಾಹನಗಳ ಒಳಗೆಯೇ ಸಿಲುಕಿಕೊಂಡಿದ್ದರು. ಬೆಂಕಿ ಅತ್ಯಂತ ವೇಗವಾಗಿ ಹರಡಿದ್ದರಿಂದ ಜನರಿಗೆ ತಪ್ಪಿಸಿಕೊಳ್ಳಲು ಸಮಯವೇ ಸಿಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಸುಟ್ಟುಹೋದ ಕಾರುಗಳು, ಮಿನಿ ಬಸ್‌ಗಳು ಮತ್ತು ಮೋಟಾರ್‌ಸೈಕಲ್‌ಗಳು ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈಜಿಪ್ಟ್ ಆರೋಗ್ಯ ಸಚಿವಾಲಯದ ಪ್ರಕಾರ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ 39 ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು. ಘಟನೆಯಲ್ಲಿ ಸಂಭವಿಸಿದ ಒಟ್ಟು ಸಾವು-ನೋವು ಹಾಗೂ ಆಸ್ತಿಪಾಸ್ತಿ ನಷ್ಟದ ಕುರಿತು ನಿಖರ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.

Must Read