ಹೊಸದಿಗಂತ ಡಿಜಿಟಲ್ ಡೆಸ್ಕ್:
ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ಗುರುವಾರ ಮಧ್ಯಾಹ್ನ ನಗರದ ಪ್ರಮುಖ ತೈಲ ಸಂಸ್ಕರಣಾ ಮತ್ತು ಸಂಗ್ರಹಣಾ ಘಟಕದಲ್ಲಿ ಏಕಾಏಕಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ದಟ್ಟ ಕಪ್ಪು ಹೊಗೆ ಆಕಾಶದೆತ್ತರಕ್ಕೆ ವ್ಯಾಪಿಸಿದೆ.
ಘಟನೆಯಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ದುರ್ಘಟನೆಯಲ್ಲಿ ಕನಿಷ್ಠ ಏಳು ಮಂದಿ ಗಾಯಗೊಂಡಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಸ್ಫೋಟದ ಸದ್ದು
ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಬ್ಯಾಂಕಾಕ್ನ ಪೂರ್ವ ಭಾಗದಲ್ಲಿರುವ ಬಾಂಗ್ಚಾಕ್ ತೈಲ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಬಳಿಕ ಘಟಕದಿಂದ ದಟ್ಟ ಕಪ್ಪು ಹೊಗೆ ಹೊರಹೊಮ್ಮುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಕಿಯ ತೀವ್ರತೆಯಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೊಳಗಾಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ನಡೆಸಿದ್ದು, ಒಂದು ಗಂಟೆಯೊಳಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಬ್ಯಾಂಕಾಕ್ ನಗರಾಡಳಿತ ತಿಳಿಸಿದೆ.
ಇದನ್ನೂ ಓದಿ:
ನಿವಾಸಿಗಳಿಗೆ ಸ್ಥಳಾಂತರ ಸೂಚನೆ
ತೈಲ ಘಟಕದ ಮಾಲೀಕತ್ವ ಹೊಂದಿರುವ ಬಾಂಗ್ಚಾಕ್ ಕಾರ್ಪೊರೇಷನ್ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಬಾಂಗ್ನಾ ಜಿಲ್ಲಾಡಳಿತಕ್ಕೆ ತಿಳಿಸಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಘಟಕದ ಸುತ್ತಮುತ್ತ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಥಾಯ್ಲೆಂಡ್ನ ಪ್ರಮುಖ ತೈಲ ಘಟಕ
ದಿನಕ್ಕೆ 1.20 ಲಕ್ಷ ಬ್ಯಾರೆಲ್ ತೈಲ ಸಂಸ್ಕರಣಾ ಸಾಮರ್ಥ್ಯ ಹೊಂದಿರುವ ಈ ಘಟಕ ಥಾಯ್ಲೆಂಡ್ನ ಐದನೇ ಅತಿದೊಡ್ಡ ಸಂಸ್ಕರಣಾ ಘಟಕವಾಗಿದೆ. ನಗರ ಪ್ರದೇಶದಲ್ಲಿರುವ ಏಕೈಕ ತೈಲ ಸಂಸ್ಕರಣಾ ಘಟಕ ಎಂಬ ವಿಶೇಷತೆಯನ್ನೂ ಹೊಂದಿದೆ.



