November 26, 2026
Thursday, November 26, 2026
spot_img

ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ: 7 ಪ್ರಯಾಣಿಕರಿಗೆ ಗಾಯ

ಹೊಸದಿಗಂತ ವರದಿ ಹಾವೇರಿ:

ಮುಂಜಾನೆಯ ಪ್ರಯಾಣದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಲಕ್ಸುರಿ ಬಸ್ ರಸ್ತೆಯಲ್ಲೇ ಉರುಳಿಬಿದ್ದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ. ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾಷ್ಟ್ರೀಯ ಹೆದ್ದಾರಿ 68ರಲ್ಲಿ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಇಂಟರ್‌ಸಿಟಿ ಖಾಸಗಿ ಲಕ್ಸುರಿ ಬಸ್ ಮೊಟೆಬೆನ್ನೂರು ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಚಾಲಕನಿಗೆ ನಿದ್ರೆಯ ಮಂಪರು ಆವರಿಸಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ:

ಬಸ್ ಉರುಳಿಬಿದ್ದ ರಭಸಕ್ಕೆ ಪ್ರಯಾಣಿಕರು ಗಾಯಗೊಂಡಿದ್ದು, ಓರ್ವ ಪ್ರಯಾಣಿಕನ ಕಾಲು ಬಸ್‌ನ ಅಡಿಯಲ್ಲಿ ಸಿಲುಕಿಕೊಂಡಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದವರು ಹರಸಾಹಸ ಪಟ್ಟು ಬಸ್ ಎತ್ತಿ ಆತನನ್ನು ಹೊರತೆಗೆದಿದ್ದಾರೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

Skip to toolbar