ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸಲ್ಲಿಸಿದ ಪ್ರಾಥಮಿಕ ವರದಿಯ ಕೆಲವು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.
ದುರಂತದ ಬಗ್ಗೆ ಸ್ವತಂತ್ರ, ನ್ಯಾಯಯುತ ಮತ್ತು ಕಾಲಮಿತಿಯ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಮೇರೆಗೆ ನ್ಯಾಯಾಲಯವು ಕೇಂದ್ರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಗೆ ನೊಟೀಸ್ ಜಾರಿ ಮಾಡಿದೆ.
ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI171 ಜೂನ್ 12 ರಂದು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದ್ದು, ಒಟ್ಟು 265 ಜನರು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಕೇವಲ ಪೈಲಟ್ನದ್ದೇ ತಪ್ಪು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಈ ವೇಳೆ ನಾಗರಿಕ ವಿಮಾನಯಾನ ಸಚಿವಾಲಯ, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋದಿಂದ ನ್ಯಾಯಾಲಯವು ಪ್ರತಿಕ್ರಿಯೆಗಳನ್ನು ಕೋರಿದೆ.
ಸ್ವತಂತ್ರ, ನಿಷ್ಪಕ್ಷಪಾತ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮಾತ್ರ ನೊಟೀಸ್ ನೀಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಅಪಘಾತ ನಡೆದು 100 ದಿನಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ಪ್ರಾಥಮಿಕ ವರದಿ ಮಾತ್ರ ಬಿಡುಗಡೆಯಾಗಿದೆ ಎಂದು ಹೇಳಿದರು.
ಜುಲೈ 12 ರಂದು ಬಿಡುಗಡೆಯಾದ AAIB ಪ್ರಾಥಮಿಕ ವರದಿಯು ಪೈಲಟ್‌ಗಳ (Pilots) ಕಡೆಯಿಂದ ಲೋಪಗಳನ್ನು ಸೂಚಿಸಿದೆ ಎಂಬುದನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠವು ಗಮನಿಸಿತು. ಈ ಅಂಶಗಳು ದುರದೃಷ್ಟಕರ, ಬೇಜವಾಬ್ದಾರಿ ಎಂದ ಪೀಠ ಈ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿತು.
ಈ ವರದಿಯ ಉಲ್ಲೇಖಗಳನ್ನು ಪ್ರಶ್ನಿಸಿ ವಿಮಾನಯಾನ ಸುರಕ್ಷತೆ ಎನ್‌ಜಿಒ ಸೇಫ್ಟಿ ಮ್ಯಾಟರ್ಸ್ ಫೌಂಡೇಶನ್, ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡಿತ್ತು. ಇಂಧನ-ಸ್ವಿಚ್ ದೋಷಗಳು ಮತ್ತು ವಿದ್ಯುತ್ ದೋಷಗಳಂತಹ ವ್ಯವಸ್ಥಿತ ವೈಪರೀತ್ಯಗಳನ್ನು ಕಡಿಮೆ ಮಾಡಿ, ಪೈಲಟ್ ದೋಷದ ನಿರೂಪಣೆ ಮಾಡಲಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಟೀಕಿಸಲಾಗಿತ್ತು.