Wednesday, November 26, 2025

200 ರೂ ಸಿನಿಮಾ ಟಿಕೆಟ್‌ ದರ ಮಿತಿ ನಿಯಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಸರ್ಕಾರ ಕಳೆದ ದಿನಗಳಲ್ಲಿ ಬಿಡುಗಡೆ ಮಾಡಿದ್ದ ‘ಸಿನಿಮಾ ಟಿಕೆಟ್‌ ದರ ಗರಿಷ್ಠ 200 ರೂ.’ ಆದೇಶವು ಕಾನೂನಾತ್ಮಕ ವಿವಾದಕ್ಕೆ ಕಾರಣವಾಗಿದೆ. ಈ ನಿಯಮಕ್ಕೆ ಚಿತ್ರರಂಗದ ಕಂಪನಿಗಳು ಹಾಗೂ ಮಲ್ಟಿಪ್ಲೆಕ್ಸ್ ಗಳ ಪ್ರತಿನಿಧಿಗಳು ಆಕ್ಷೇಪ ವ್ಯಕ್ತಪಡಿಸಿ, ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ್ದರು. ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿ, ಈ ನಿಯಮವನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ.

ಮಲ್ಟಿಪ್ಲೆಕ್ಸ್ ಗಳನ್ನು ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ, ಟಿಕೆಟ್‌ ದರ ಗರಿಷ್ಠ 200 ರೂ. ಏಕರೂಪ ನಿಗದಿಪಡಿಸಲು ರಾಜ್ಯ ಸರ್ಕಾರ ತೆಗೆದುಕೊಂಡ ನಿಯಮಗಳನ್ನು ಪ್ರಶ್ನಿಸಿ, ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌, ಮಲ್ಟಿಪ್ಲೆಕ್ಸ ಅಸೋಸಿಯೇಷನ್ ಆಫ್ ಇಂಡಿಯಾ, ಪಿವಿಆರ್, ಐನಾಕ್ಸ್ ಲಿಮಿಟೆಡ್, ಕೀಸ್ಟೋನ್ ಎಂಟರ್ಟೈನ್ಮೆಂಟ್ ಹಾಗೂ ವಿ.ಕೆ. ಫಿಲ್ಮ್ಸ್‌ ಹಸ್ತಕ್ಷೇಪ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ, ನ್ಯಾ. ರವಿ ಹೊಸಮನಿ ಅವರ ಅಧ್ಯಕ್ಷತೆಯಲ್ಲಿ ಇರುವ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿದ್ದು, ಪೂರ್ಣ ವಿಚಾರಣೆಯನ್ನು ಮುಂದೂಡಲಾಗಿದೆ.

ಅರ್ಜಿದಾರರು ನ್ಯಾಯಾಲಯಕ್ಕೆ ಹೇಳಿದ್ದು, ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಟಿಕೆಟ್‌ ದರ ನಿಗದಿ ಮಾಡಿದೆ. ಸಾವಿರಾರು ಕೋಟಿ ರೂ. ಹೂಡಿಕೆ ಮಾಡುವ ಚಿತ್ರ ನಿರ್ಮಾಣ ಸಂಸ್ಥೆಗಳು, ಕಡಿಮೆ ಸೀಟುಗಳಿಗೆ ಹೆಚ್ಚಿನ ಸೌಲಭ್ಯ ನೀಡಲು ಬದ್ಧರಾಗಿರುವಾಗ, ಸರ್ಕಾರದ ನಿರ್ಧಾರ ಚಿತ್ರರಂಗದ ಆರ್ಥಿಕ ಸ್ಥಿತಿಗೆ ಪೆಟ್ಟು ಬೀಳಲಿದೆ ಎಂದು ಆರೋಪಿಸಿದರು.

error: Content is protected !!