ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ. ಈ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು.
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ. ನವ ದೇವಿಯ ಆರಾಧನೆ ಮಾಡಿ. ದುಷ್ಟರ ವಿರುದ್ಧ ಶಿಷ್ಟರ ರಕ್ಷಣೆ ಮಾಡುವ ದೇವಿಯ ಆರಾಧನೆ ಮಾಡುವುದೇ ವಿಜಯ ದಶಮಿ. ಇಡೀ ವಿಶ್ವಕ್ಕೆ ಸಂಸ್ಕೃತಿಯ ರುಚಿಯನ್ನು ಕೊಟ್ಟವರು ಮಹಿಳೆಯರು. ಹಿಂದೆ ರಾಜರು ಆಳ್ವಿಕೆ ಮಾಡುತ್ತಿದ್ದರು. ಆದರೆ ಈಗ ಸರ್ಕಾರ ಬಹಳ ವಿಜೃಂಭಣೆಯಿಂದ ದಸರಾ ಆಚರಿಸುತ್ತಾ ಬರುತ್ತಿದೆ ಎಂದರು.
ಐಸಿಡಿಎಸ್ ವ್ಯಾಪ್ತಿಗೆ ಬರುವ ಅಂಗನವಾಡಿ ಕೇಂದ್ರ ಆರಂಭವಾಗಿ ಐವತ್ತು ವರ್ಷ ಆಗಿದ್ದು, ಇದೀಗ ಸುವರ್ಣ ಮಹೋತ್ಸವ ಕಾರ್ಯಕ್ರಮ ಮಾಡಲು ಚಿಂತನೆ ನಡೆದಿದೆ. ಎಲ್ ಕೆಜಿ, ಯುಕೆಜಿ ಆರಂಭಿಸುವ ಮೂಲಕ ಅಂಗನವಾಡಿಯನ್ನು ಮತ್ತೊಂದು ಹೆಜ್ಜೆ ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದರು.