ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ. ಎಸ್.ಎಸ್. ಭೈರಪ್ಪ ಯುವ ತಲೆಮಾರಿಗೆ ಸ್ಫೂರ್ತಿ ಎಂದು ದ್ರೌಪದಿ ಮುರ್ಮು ಬಣ್ಣಿಸಿದ್ದಾರೆ.
‘ಕನ್ನಡ ಸಾಹಿತ್ಯದ ಅತ್ಯುನ್ನತ ವ್ಯಕ್ತಿ ಮತ್ತು ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಸಾಹಿತ್ಯ ಮಾತ್ರವಲ್ಲದೆ ತತ್ವಶಾಸ್ತ್ರ, ಸಂಸ್ಕೃತಿ ಮತ್ತು ಬೌದ್ಧಿಕ ವಿಚಾರಣಾ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರು ತಮ್ಮ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಅವರ ಕೃತಿ, ಅವರ ಜೀವನ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ. ಭೈರಪ್ಪ ಅವರ ನಿಧನಕ್ಕೆ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ’ ಎಂದು ದ್ರೌಪದಿ ಮುರ್ಮು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಂತಾಪ ಸೂಚಿಸಿದ್ದಾರೆ. ‘ಕನ್ನಡದ ಪ್ರಸಿದ್ಧ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ. 6 ದಶಕಗಳ ಕಾಲ ಭೈರಪ್ಪನವರು ಭಾರತೀಯ ದಾರ್ಶನಿಕ ಪರಂಪರೆಯ ಜ್ಞಾನ ಮತ್ತು ಸಾಮಾಜಿಕ ವಿಚಾರಗಳ ಆಳವಾದ ಒಳನೋಟಗಳಿಂದ ನಮ್ಮ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದರು. 2023ರಲ್ಲಿ ನರೇಂದ್ರ ಮೋದಿ ಸರ್ಕಾರವು ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟʼ ಎಂದು ಬರೆದುಕೊಂಡಿದ್ದಾರೆ.