ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆದಿ ಕರ್ನಾಟಕ ಹೈಕೋರ್ಟ್ ಅಂತಿಮವಾಗಿ ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ನಡೆಸಲು ಕೆಲ ಷರತ್ತುಗಳನ್ನು ವಿಧಿಸಿದೆ. ಇದರೊಂದಿಗೆ ಕಾನೂನು ಹೋರಾಟದಕ್ಕೆ ರಾಜ್ಯ ಸರ್ಕಾರ ಮೇಲುಗೈ ಸಾಧಿಸಿದಂತಾಗಿದೆ.
ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ, ಎರಡು ದಿನ ವಾದ ಪ್ರತಿವಾದ ಆಲಿಸಿದ್ದು, ಅಂತಿಮವಾಗಿ ಇಂದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ, ಆಯೋಗಕ್ಕೆ ಕೆಲವು ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.
ದತ್ತಾಂಶವನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು. ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಹೈಕೋರ್ಟ್ ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಅಲ್ಲದೇ ದತ್ತಾಂಶದ ಗೌಪ್ಯತೆ ಸಂಬಂಧ ಪ್ರಮಾಣಪತ್ರ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿದೆ.