Friday, September 26, 2025

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ: ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್‌ ಸೂಚಿಸಿದೆ .

ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಎಂ.ಪಿ. ರೇಣುಕಾಚಾರ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಈ ಮಧ್ಯಂತರ ಆದೇಶ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಪೊಲೀಸರು ಬಲವಂತದ ಕ್ರಮ ಜರುಗಿಸಬಾರದು. ಅರ್ಜಿದಾರರು ತನಿಖೆಗೆ ಸಹಕರಿಸಬೇಕು ಎಂದು ಮಧ್ಯಂತರ ಆದೇಶಿಸಿರುವ ಪೀಠ, ಅರ್ಜಿಯಲ್ಲಿ ಪ್ರತಿವಾದಿಗಳಾದ ದಾವಣಗೆರೆ ಬಡಾವಣೆ ಠಾಣೆ ಪೊಲೀಸರು ಹಾಗೂ ದೂರುದಾರ ಪೊಲೀಸ್‌ ಪೇದೆ ಬಿ.ಆರ್. ರವಿ (ಪೊಲೀಸ್ ಸಿಬ್ಬಂದಿ) ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.

ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿ ನಡೆಸಿ, ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಎಫ್‌ಐಆರ್ ದಾಖಲಾಗಿತ್ತು.

ಇದನ್ನೂ ಓದಿ