ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧೆಡೆ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ನಡೆಸಲಾಗುತ್ತಿರುವ ಸಮೀಕ್ಷೆ ಮುಂದುವರೆದಿದ್ದು, ಈ ನಡುವೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸದೇ ಕರ್ತವ್ಯಲೋಪ ಎಸಗಿರುವ ಆರೋಪದ ಮೇರೆಗೆ ಇಬ್ಬರು ಶಿಕ್ಷಕರು ಸೇರಿದಂತೆ ಮೂವರನ್ನು ಸೇವೆಯಿಂದ ಅಮಾನತುಗೊಳಿಸಿ ದಾವಣಗೆರೆ ಜಿಲ್ಲಾಧಿಕಾರಿ ಡಾ .ಜಿ.ಎಂ.ಗಂಗಾಧರ ಸ್ವಾಮಿ ಆದೇಶಿಸಿದ್ದಾರೆ.
ಸೆ.22ರಿಂದ ಅ.7ರವರೆಗೆ ಸಮೀಕ್ಷಾ ಕಾರ್ಯಕೈಗೊಳ್ಳಲು ಆದೇಶಿಸಲಾಗಿದ್ದು, ಸದರಿ ನೌಕರರು ಸಮೀಕ್ಷಾ ಕಾರ್ಯಕ್ಕೆ ಗೈರು ಹಾಜರಾಗಿದ್ದರು, ಈ ಸಂಬಂಧ ಕಾರಣ ಕೇಳಿ ನೀಡಿದ್ದ ನೋಟಿಸಿಗೂ ಉತ್ತರ ನೀಡದ ಹಿನ್ನೆಲೆಯಲ್ಲಿ ಮೂವರು ನೌಕರರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದಲೇ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಇದುವರೆಗೆ 44 ಸಾವಿರದ 464 ಮನೆಗಳ ಸಮೀಕ್ಷೆ ಪೂರ್ಣಗೊಳಿಸಿದೆ. ಈ ಸಮೀಕ್ಷೆ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ 2 ಸಾವಿರದ 916 ಬ್ಲಾಕ್ ರಚಿಸಲಾಗಿದ್ದು,3 ಸಾವಿರದ 56 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 3 ಲಕ್ಷದ 26 ಸಾವಿರದ 860 ಮನೆಗಳನ್ನು ಸಮೀಕ್ಷೆ ಮಾಡುವ ಗುರಿ ಹೊಂದಲಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿಯಲ್ಲಿ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಜಿಲ್ಲೆಯ ಗಣತಿದಾರರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಿರುಸು: ಕರ್ತವ್ಯ ಲೋಪ ಎಸಗಿದ ಇಬ್ಬರು ಶಿಕ್ಷಕರು ಸಹಿತ ಮೂವರು ಶಿಕ್ಷಕರ ಅಮಾನತು!
