ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಬಿಜೆಪಿಯ ನಾಯಕರು ಬಹಿಷ್ಕರಿಸುವಂತೆ ಕರೆ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದೆ . ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ ಎಂದು ಹೇಳಿದ್ದಾರೆ. ಸರ್ಕಾರ ನಡೆಸುವ ಸಮೀಕ್ಷೆಯಿಂದ ಕೇವಲ ದಲಿತ, ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿ-ಗತಿ ಮಾತ್ರವಲ್ಲ, ಮುಂದುವರಿದ ಜಾತಿಗಳೊಳಗಿನ ಬಡವರು ಮತ್ತು ಅವಕಾಶ ವಂಚಿತರ ಸ್ಥಿತಿಗತಿಯೂ ಗೊತ್ತಾಗಲಿದೆ. ಈ ವಾಸ್ತವಸ್ಥಿತಿ ಅರಿವಾಗುವುದು ಬಿಜೆಪಿಯವರಿಗೆ ಬೇಡವಾಗಿದೆ ಎಂದು ದೂರಿದ್ದಾರೆ. ಬಿಜೆಪಿ ನಾಯಕರ ಈ ಆತ್ಮವಂಚಕ ನಡವಳಿಕೆಯನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.