Tuesday, September 30, 2025

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

ಹೊಸದಿಗಂತ ವರದಿ ಕಲಬುರಗಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆಗಾಗಿ ಕಲ್ಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.

ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ,ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಮುಖ್ಯಮಂತ್ರಿಗಳ ಸಭೆಯಲ್ಲಿದ್ದು, ವಿವರ ನೀಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲಬುರಗಿ ವಿಮಾನ ನಿಲ್ದಾಣದಿಂದ ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ ಸಮೀಕ್ಷೆಗೆ ತೆರಳಿದರು.

ಮೊದಲ ಸುತ್ತಿನ ವೈಮಾನಿಕ ಸಮೀಕ್ಷೆ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಮಧ್ಯಾಹ್ನ 2:30 ರ ಸುಮಾರಿಗೆ ಕೈಗೊಳ್ಳಲಿದ್ದಾರೆ.