Tuesday, September 30, 2025

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್​ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ (ಎಸಿ) ಸ್ಟೆಲ್ಲಾ ವರ್ಗಿಸ್ ಅವರು ಸೆಪ್ಟೆಂಬರ್ 18 ರಂದು ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲದ ಏಕಸದಸ್ಯ ಪೀಠವು ಈ ಆದೇಶವನ್ನು ನೀಡಿದೆ. ಪುತ್ತೂರು ಸಹಾಯಕ ಆಯುಕ್ತೆ ಹೊರಡಿಸಿದ್ದ ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಅವರು ತಮ್ಮ ವಕೀಲರ ಮೂಲಕ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ನ್ಯಾ. ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಪೊಲೀಸರ ವರದಿ ಮತ್ತು ಮನವಿಯ ಆಧಾರದ ಮೇಲೆ, ಮಹೇಶ್‌ ಶೆಟ್ಟಿ ತಿಮರೋಡಿ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 32 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುವ ಚಟುವಟಿಕೆಗಳಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆಯ ಸೆಕ್ಷನ್ 55 ರ ಅಡಿಯಲ್ಲಿ ಈ ಗಡಿಪಾರು ಆದೇಶವನ್ನು ನೀಡಲಾಗಿತ್ತು.

ಈ ಮಧ್ಯಂತರ ತಡೆಯಿಂದಾಗಿ, ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಗಡಿಪಾರು ಆದೇಶದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ವಿಚಾರಣೆ ಅಕ್ಟೋಬರ್ 8 ರಂದು ನಡೆಯಲಿದೆ.