ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರಿ ನೌಕರರ ಮಕ್ಕಳಿಗೆ ದಸರಾ ಹಬ್ಬದ ಕೊಡುಗೆ ಎನ್ನುವಂತೆ 57 ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ, 2026-27ರಿಂದ 9 ವರ್ಷಗಳ ಅವಧಿಯಲ್ಲಿ 5862.55 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಒಟ್ಟು 57 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಒಪ್ಪಿಗೆ ಸೂಚಿದೆ ಎಂದು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರಿ ನೌಕರರ ಮಕ್ಕಳ ಶೈಕ್ಷಣಿಕ ಅಗತ್ಯತೆ ಪೂರೈಸಲು ಬದ್ಧವಾಗಿ ಕೇಂದ್ರ ಸರ್ಕಾರ ಈ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ. ನೂತನ ವಿದ್ಯಾಲಯಗಳನ್ನು ತೆರೆಯಲು 585.52 ಕೋಟಿ ಬಂಡವಾಳ ವೆಚ್ಚ ಮತ್ತು 3277.03 ಕೋಟಿ ಕಾರ್ಯಾಚರಣೆ ವೆಚ್ಚವನ್ನು ಅಂದಾಜಿಸಿದೆ.