Wednesday, October 8, 2025

WEATHER | ಕರ್ನಾಟಕದಲ್ಲಿ ಚಂಡಮಾರುತ ಪ್ರಭಾವ: ಅಕ್ಟೋಬರ್ 8ರವರೆಗೆ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದ್ದು, ಇದರ ಪರಿಣಾಮವಾಗಿ ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ಒಡಿಶಾ ರಾಜ್ಯಗಳಲ್ಲಿ ಮಳೆಯು ಮುಂದುವರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಉತ್ತರ ಆಂಧ್ರಪ್ರದೇಶದಲ್ಲಿ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಂಟೆಗೆ 40 ರಿಂದ 60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಹಲವೆಡೆ ಅಕ್ಟೋಬರ್ 8ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಯಲ್ಲಾಪುರ, ಹೊನ್ನಾವರ, ಅಂಕೋಲಾ, ಕಾರವಾರ, ಕುಮಟಾ, ಕುಂದಾಪುರ, ಮಂಗಳೂರು ಸೇರಿದಂತೆ ಹಲವೆಡೆ ಈಗಾಗಲೇ ಮಳೆಯಾಗಿದೆ. ಆಗುಂಬೆ, ಕ್ಯಾಸಲ್ ರಾಕ್, ಗೇರುಸೊಪ್ಪ, ಮುಂಡಗೋಡ, ಲೋಂಡಾ ಮುಂತಾದ ಪ್ರದೇಶಗಳಲ್ಲಿಯೂ ಮಳೆಯ ವರದಿಯಾಗಿದೆ.

ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ ಮುಂದುವರಿದಿದ್ದು, ತಾಪಮಾನ ಸಾಮಾನ್ಯ ಮಟ್ಟದಲ್ಲಿ ದಾಖಲಾಗಿದೆ. ಎಚ್‌ಎಎಲ್, ಕೆಐಎಎಲ್ ಹಾಗೂ ಜಿಕೆವಿಕೆಯಲ್ಲಿ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಸರಾಸರಿ 29 ಡಿಗ್ರಿ ಹಾಗೂ 20 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ದಾಖಲಾಗಿದೆ.

ಮಂಗಳೂರು, ಕಾರವಾರ, ಹೊನ್ನಾವರ, ಶಕ್ತಿನಗರ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿಯೂ ಉಷ್ಣಾಂಶದಲ್ಲಿ ಸ್ವಲ್ಪ ಬದಲಾವಣೆ ಕಂಡುಬಂದಿದೆ.

error: Content is protected !!