ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಆರು ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ದುರ್ಘಟನೆ ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಪಟಾಕಿ ತಯಾರಿಸುವಾಗಲೇ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಘಟಕದೊಳಗಿದ್ದ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಇದೇ ವೇಳೆ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾ ಡಿಎಸ್ಪಿ ರಾಹುಲ್ ಮೀನಾ, ಮೃತರು ಮತ್ತು ಗಾಯಾಳುಗಳು ಎಲ್ಲರೂ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೇ ಎಂದು ತಿಳಿಸಿದ್ದಾರೆ. ಸ್ಫೋಟದ ನಿಖರ ಕಾರಣ ತಿಳಿದುಬರಬೇಕಿದೆ.
ಈ ದುರ್ಘಟನೆಯಿಂದಾಗಿ ಪ್ರದೇಶದಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಇಂತಹ ಪಟಾಕಿ ತಯಾರಿಕಾ ಘಟಕಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸದಿದ್ದರೆ ಇಂಥ ಭೀಕರ ಘಟನೆಗಳು ಮರುಕಳಿಸಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.