March 24, 2026
Tuesday, March 24, 2026
spot_img

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದ ಅವರು, ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ, ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದಿದ್ದಾರೆ.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಅರಣ್ಯ ರಾಯಭಾರಿ ಅನಿಲ್ ಕುಂಬ್ಳೆ, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !