ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ಹಳ್ಳಿಯೊಂದರಲ್ಲಿ ಗುರುವಾರ ರಾತ್ರಿ ಸಂಭವಿಸಿದ ಪ್ರಬಲ ಸ್ಫೋಟದ ನಂತರ ಮನೆ ಕುಸಿದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಹಲವು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಫೋಟಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ ಎಂದು ಸರ್ಕಲ್ ಆಫೀಸರ್ (ಸಿಒ) ಶೈಲೇಂದ್ರ ಸಿಂಗ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಆಡಳಿತ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಅಗೆತದ ಯಂತ್ರಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಮೀಪದಲ್ಲಿದ್ದ ಮನೆಗಳನ್ನು ಸ್ಥಳಾಂತರಿಸಲಾಗಿದೆ.
ರಕ್ಷಣಾ ಕಾರ್ಯಗಳಿಗೆ ಅನುಕೂಲವಾಗುವಂತೆ ಅಪಘಾತ ಸ್ಥಳದಿಂದ ದೂರ ಉಳಿಯುವಂತೆ ಅಧಿಕಾರಿಗಳು ನಿವಾಸಿಗಳಿಗೆ ಮನವಿ ಮಾಡಿದ್ದಾರೆ. ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡುತ್ತಿದ್ದು, ಸ್ಫೋಟದ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.