ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ವಿಷಯವು ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಪ್ರಮುಖ ವಿಷಯವಾಗಿದೆ. ಕೆಲವರು ಇದನ್ನು ಶಿಕ್ಷಣದ ಅವಿಭಾಜ್ಯ ಅಂಗವೆಂದು ಪರಿಗಣಿಸುತ್ತಿದ್ದರೆ, ಇನ್ನು ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಈಗ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಸ್ಪಷ್ಟ ನಿಲುವು ತೆಗೆದುಕೊಂಡಿದ್ದು, ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕೆಂದು ಮಹತ್ವದ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಅರಾಧೆ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ಒಂಬತ್ತನೇ ತರಗತಿಯಿಂದ ಪ್ರಾರಂಭಿಸುವ ಬದಲು, ಪ್ರಾಥಮಿಕ ಹಂತದಿಂದಲೇ ನೀಡಬೇಕು ಎಂದು ತಿಳಿಸಿದೆ. ಇದು ಮಕ್ಕಳಲ್ಲಿ ಪ್ರೌಢಾವಸ್ಥೆಯ ವೇಳೆ ಉಂಟಾಗುವ ಹಾರ್ಮೋನು ಬದಲಾವಣೆಗಳು, ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗಳ ಕುರಿತು ಅರಿವು ಮೂಡಿಸಲು ಸಹಕಾರಿ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಶಾಲಾ ಪಠ್ಯಕ್ರಮದಲ್ಲಿ ಈ ವಿಷಯವನ್ನು ಅಳವಡಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಿತ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ಶಾರೀರಿಕ ಬದಲಾವಣೆಗಳ ಬಗ್ಗೆ ಸರಿಯಾದ ಮಾಹಿತಿ ದೊರೆತರೆ, ಅವರು ಹೆಚ್ಚು ಜಾಗೃತರಾಗಿದ್ದು, ಸುರಕ್ಷಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯವಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಹೇಳಿಕೆ, 15 ವರ್ಷದ ಬಾಲಾಪರಾಧಿಗೆ ಜಾಮೀನು ಮಂಜೂರು ಮಾಡುವ ವಿಚಾರಣೆಯ ವೇಳೆ ಹೊರಬಂದಿದ್ದು, ಆ ಬಾಲಕನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 506 (ಬೆದರಿಕೆ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 6 (ತೀವ್ರ ಲೈಂಗಿಕ ದೌರ್ಜನ್ಯ) ಅಡಿ ಪ್ರಕರಣ ದಾಖಲಾಗಿತ್ತು.