ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಮತ್ತೆ ತೀವ್ರಗೊಂಡಿದ್ದು, ವಿಶೇಷವಾಗಿ ಬೆಂಗಳೂರಿನಲ್ಲಿ ಮೂರು ರಾತ್ರಿ ನಿರಂತರವಾಗಿ ಸುರಿದ ಧಾರಾಕಾರ ಮಳೆಯ ಪರಿಣಾಮ ಅನೇಕ ಕಡೆಗಳಲ್ಲಿ ಸಾಮಾನ್ಯ ಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಇಂದು ಕೂಡಾ ಮಳೆ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದು, ನಾಗರಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಇಂದು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಮತ್ತು ಟ್ರಾಫಿಕ್ ಸಮಸ್ಯೆ ಉಂಟಾಗುವ ಭೀತಿ ಇದೆ. ಅಧಿಕಾರಿಗಳು ನಾಗರಿಕರಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.
ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಚಟುವಟಿಕೆ ತೀವ್ರಗೊಳ್ಳುವ ಹಿನ್ನೆಲೆ, ಹವಾಮಾನ ಇಲಾಖೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹೊರಡಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳು ಈ ಪಟ್ಟಿಯಲ್ಲಿ ಸೇರಿವೆ.