ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಲ ಮಕ್ಕಳನ್ನು ಸಾವಿನದವಡೆಗೆ ತಳ್ಳಿದ ಕೆಮ್ಮಿನ ಸಿರಪ್ ಪ್ರಕರಣಕ್ಕೆ ಸಂಬಂಧಿಸಿ, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚೆನ್ನೈನ ಏಳು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಅಕ್ರಮ ಹಣ ವರ್ಗಾವಣೆಯ ಪ್ರಶ್ನೆಗಳಿಗೆ ಸಂಬಂಧಿಸಿದ ತನಿಖೆಯನ್ನು ಮುಂದುವರೆಸುತ್ತಿದ್ದಾರೆ.
ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಮತ್ತು ತಮಿಳುನಾಡು ಆಹಾರ ಹಾಗೂ ಔಷಧ ಆಡಳಿತದಿಂದ ಕೆಲವು ನಿಯಮ ಉಲ್ಲಂಘನೆಯ ಘಟನೆಗಳು ಕಂಡುಬಂದಿದ್ದು, ಶ್ರೇಸನ್ ಫಾರ್ಮಾ 2011ರಲ್ಲಿ ಪರವಾನಗಿ ಪಡೆದ ನಂತರ ನಿರಂತರವಾಗಿ ನಿಯಂತ್ರಣವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ, ಇಡಿ ಅಧಿಕಾರಿಗಳು ಚೆನ್ನೈನ ಏಳು ಸ್ಥಳಗಳಲ್ಲಿ ದಾಳಿ ನಡೆಸಿ ಸಾಕ್ಷ್ಯ ಸಂಗ್ರಹ ಕಾರ್ಯಾಚರಣೆ ನಡೆಸಿದ್ದಾರೆ.
ಈ ಪ್ರಕರಣದಲ್ಲಿ, ಡೈಎಥಿಲಿನ್ ಗ್ಲೈಕಾಲ್ ಮತ್ತು ಎಥಿಲಿನ್ ಗ್ಲೈಕಾಲ್ ಸಮೇತ ಸಿರಪ್ ಸೇವಿಸಿದ್ದರಿಂದ 20 ಮಕ್ಕಳು ಮೂತ್ರಪಿಂಡ ಸೋಂಕಿನಿಂದ ಸಾವನ್ನಪ್ಪಿದ್ದರು. ಅನೇಕ ಮಕ್ಕಳು ಇನ್ನೂ ಆರೋಗ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುವ ಶ್ರೇಸನ್ ಫಾರ್ಮಾ ಮಾಲೀಕ ರಂಗನಾಥನ್ ರನ್ನು ಮಧ್ಯಪ್ರದೇಶ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದರು. ಸಿಬಿಐ ತನಿಖೆಗೆ ಮನವಿ ಸಲ್ಲಿಸಲಾಗಿದ್ದರೂ, ಸುಪ್ರೀಂ ಕೋರ್ಟ್ ಅದನ್ನು ತಿರಸ್ಕರಿಸಿದೆ.