ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (ಕೆಪಿಎಸ್) ಪರಿವರ್ತಿಸಲು ಯೋಜನೆ ರೂಪಿಸಲಾಗಿದ್ದು, ಈ ಯೋಜನೆಯಡಿ, ಪ್ರತಿ ಶಾಲೆಯನ್ನು 4 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ.ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ, ಏಷ್ಯನ್ ಡೆವೆಲಪ್‍ಮೆಂಟ್ ಬ್ಯಾಂಕ್(ಎಡಿಬಿ) ಸಹಯೋಗದೊಂದಿಗೆ ರಾಜ್ಯ ಸರಕಾರದ ವತಿಯಿಂದ 500 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು ಎಂದರು.
ಜೊತೆಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ನಿಧಿಯ ಮೂಲಕ 200 ಶಾಲೆಗಳನ್ನು, ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವತಿಯಿಂದ ಗಣಿ ಬಾಧಿತ 10 ತಾಲೂಕುಗಳಲ್ಲಿ 100 ಕೆಪಿಎಸ್ ಶಾಲೆಗಳನ್ನು ಉನ್ನತೀಕರಿಸಲು ಪ್ರತ್ಯೇಕ ಯೋಜನಾ ವರದಿಯನ್ನು(ಡಿಪಿಆರ್) ತಯಾರಿಸಲಾಗುವುದು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2 ರಿಂದ 3 ಕೆಪಿಎಸ್ ಶಾಲೆಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರತಿ ತಾಲೂಕಿನಲ್ಲಿ 4 ರಿಂದ 5 ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಣ ಮಾಡಲಾಗುವುದು ಎಂದು ಅವರು ವಿವರಿಸಿದರು.

