ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್ಸ್ಟೇಬಲ್ ಓರ್ವ ಕತ್ತಿಯಿಂದ ಇರಿದು ಕ್ರೂರವಾಗಿ ಕೊಲೆ ಮಾಡಿ ಪರಾರಿ ಆದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್‌ನಲ್ಲಿ ನಡೆದಿದೆ.
ಕಾಶಮ್ಮ ನೆಲ್ಲಿಗಣಿ (34), ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಸುಮಾರು 13 ವರ್ಷಗಳ ಹಿಂದೆ ಸಂತೋಷ್ ಕಾಶಮ್ಮ ಮದುವೆಯಾಗಿದ್ದರು. ಸಂತೋಷ್ ಹೆಂಡತಿಯ ಮೇಲೆ ಶಂಕೆ ಪಟ್ಟು ನಿರಂತರವಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ. ಇದರಿಂದ ನೊಂದ ಕಾಶಮ್ಮ ತಮ್ಮ ತವರು ಮನೆ ಸೇರಿದ್ದರು. ಬಳಿಕ, ಬಳಿಕ ಸವದತ್ತಿ ಡಿಪೋಗೆ ವರ್ಗಾವಣೆ ಮಾಡಿಸಿಕೊಂಡು ಅಲ್ಲೇ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಮದುವೆ ಬಳಿಕ ಕಲಹ ಮುಂದುವರಿದುದರಿಂದ, ಕಾಶಮ್ಮ ಬೈಲಹೊಂಗಲ ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿ, ಏಪ್ರಿಲ್ 5, 2025ರಂದು ಅಧಿಕೃತವಾಗಿ ವಿಚ್ಛೇದನ ಪಡೆದಿದ್ದರು. ಆದರೆ, ವಿಚ್ಛೇದನದ ನಂತರವೂ ಸಂತೋಷ್ ಕಾಶಮ್ಮನನ್ನು ನಿರಂತರವಾಗಿ ಕರೆಮಾಡಿ ನಿಂದಿಸುತ್ತಿದ್ದನೆಂದು ಕುಟುಂಬದವರು ತಿಳಿಸಿದ್ದಾರೆ.
ಅಕ್ಟೋಬರ್ 13ರ ರಾತ್ರಿ 8 ಗಂಟೆಯ ವೇಳೆಗೆ ಸಂತೋಷ್ ಕಾಶಮ್ಮನ ಮನೆಗೆ ತೆರಳಿ ಗಲಾಟೆ ನಡೆಸಿದ್ದ. ನಂತರ, ಕೋಪದಿಂದ ಕತ್ತಿಯಲ್ಲಿ ಹೊಟ್ಟೆಗೆ ಮೂರು ಬಾರಿ ಇರಿದು ಕ್ರೂರವಾಗಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ. ಮೂರು ದಿನಗಳ ಬಳಿಕ ಮನೆಯೊಳಗಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಧಾವಿಸಿದ ಸವದತ್ತಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.