ಹೊಸದಿಗಂತ ಶಿವಮೊಗ್ಗ:
ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಹಾಗೂ ಸ್ವರ್ಣ ರಶ್ಮಿ ಟ್ರಸ್ಟ್‌ಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭವು ಅಕ್ಟೋಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ಸೋಂದಾ ಸ್ವರ್ಣವಲ್ಲಿ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರು ತಿಳಿಸಿದ್ದಾರೆ.
ಶನಿವಾರ ರವೀಂದ್ರ ನಗರದ ಶ್ರೀ ಪ್ರಸನ್ನಗಣಪತಿ ದೇವಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಸ್ವಾಮೀಜಿ, ಈ ಮಹತ್ವದ ಕಾರ್ಯಕ್ರಮವು ವಿನೋಬನಗರ 60 ಅಡಿ ರಸ್ತೆಯಲ್ಲಿರುವ ಶುಭಮಂಗಳ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ವಿವರಿಸಿದರು.
ಗಣ್ಯರ ಉಪಸ್ಥಿತಿ
ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟಿಸಲಿದ್ದು, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಬಸವಕೇಂದ್ರದ ಶ್ರೀ ಬಸವಮರುಳಸಿದ್ಧ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಮಾರಂಭದಲ್ಲಿ ಸಂಸ್ಕೃತ ವಿದ್ವಾಂಸ ಡಾ.ವ್ಯಾಸನಕೆರೆ ಪ್ರಭಂಜನಾಚಾರ್ಯ, ಶಾಸಕ ಎಸ್.ಎನ್.ಚನ್ನಬಸಪ್ಪ, ಅಭಿಯಾನ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಡಿ.ಎಸ್.ಅರುಣ್ ಅವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಅಭಿಯಾನದ ಮುಖ್ಯ ಉದ್ದೇಶಗಳು
ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರು ಭಗವದ್ಗೀತಾ ಅಭಿಯಾನದ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಅಭಿಯಾನದ ಮುಖ್ಯ ಉದ್ದೇಶವು ವ್ಯಕ್ತಿತ್ವ ವಿಕಸನ, ನೈತಿಕತೆಯ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಸಾಧಿಸುವುದೇ ಆಗಿದೆ.
ಸದ್ಯ ಎಲ್ಲಾ ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯುತ್ತಿದೆ. ಮುಖ್ಯವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ನೈತಿಕತೆ ಮತ್ತು ಮೌಲ್ಯಗಳನ್ನು ಮೂಡಿಸುವ ಉದ್ದೇಶದಿಂದ ಈ ಅಭಿಯಾನವನ್ನು ನಡೆಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿಯೂ ಅಭಿಯಾನ ನಡೆಸಲು ಮನವಿ ಮಾಡುತ್ತೇವೆ, ಈ ಸಂದರ್ಭದಲ್ಲಿ ಅದಕ್ಕೆ ಅನುಮತಿ ಸಿಗುವುದು ಕಷ್ಟವೂ ಇರಬಹುದು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.
ಸುದ್ದಿಗೋಷ್ಟಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅಭಿಯಾನದ ಕಾರ್ಯಾಧ್ಯಕ್ಷ ಅಶೋಕ ಭಟ್, ಲಕ್ಷ್ಮೀನಾರಾಯಣ ಕಾಶಿ, ಅಶ್ವತ್ಥ ನಾರಾಯಣ ಶೆಟ್ಟಿ ಹಾಗೂ ಪಿ.ಪಿ.ಹೆಗಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.