Monday, October 20, 2025

WEATHER | ಕರಾವಳಿ-ಮಲೆನಾಡಲ್ಲಿ ಮಳೆ ಅಬ್ಬರ; ಬೆಂಗಳೂರಿನಲ್ಲೂ ಸಿಡಿಲು-ಮಳೆ ಆಟ ಶುರು!

ಕರ್ನಾಟಕ ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 23 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆಯ ಅಬ್ಬರ?
ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಘಟ್ಟ ಪ್ರದೇಶಗಳು ಸೇರಿದಂತೆ ಬಹುತೇಕ ರಾಜ್ಯದಲ್ಲಿ ಮಳೆಯಾಗುವ ಸಂಭವವಿದೆ.

ಕರಾವಳಿ ಅಬ್ಬರ: ಕರಾವಳಿ ಪ್ರದೇಶದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿಗೆ ಎಚ್ಚರಿಕೆ: ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ ವೇಗ) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬಳ್ಳಾರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಗುಡುಗು-ಮಳೆ: ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಬೆಂಗಳೂರಿನ ವಾತಾವರಣ ಹೇಗಿರಲಿದೆ?
ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿಯೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಇಲ್ಲಿ ಶೇಕಡಾ 78ರಿಂದ 100ರಷ್ಟು ಮಳೆಯ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 13-15 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

error: Content is protected !!