ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಾಲ್ಮೀಕಿ ಸಮಾಜದ ಮುಖಂಡರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಸ್ಫೋಟಗೊಂಡಿತು.
ಆಕ್ರೋಶಿತ ಪ್ರತಿಭಟನಾಕಾರರು ರಮೇಶ್ ಕತ್ತಿ ವಿರುದ್ಧ ಘೋಷಣೆಗಳನ್ನು ಕೂಗಿದರು, ಮಾನವ ಸರಪಳಿ ನಿರ್ಮಿಸಿ ಟೈರ್‌ಗೆ ಬೆಂಕಿ ಹಚ್ಚಿ ಉಗ್ರ ಪ್ರತಿಭಟನೆ ನಡೆಸಿದರು. ಅಲ್ಲದೆ, ಕತ್ತಿಯವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ಸಿಟ್ಟನ್ನು ಹೊರಹಾಕಿದರು. ಅವಹೇಳನಕಾರಿ ಹೇಳಿಕೆ ನೀಡಿರುವ ರಮೇಶ್ ಕತ್ತಿಯವರನ್ನು ತಕ್ಷಣವೇ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಕೇವಲ ಬೆಳಗಾವಿ ಮಾತ್ರವಲ್ಲದೆ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಇದೇ ರೀತಿಯ ಹೋರಾಟಗಳು ನಡೆದಿದ್ದು, ವಾಲ್ಮೀಕಿ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಲಾಯಿತು.